ಆಗ್ನೇಯ ಪದವೀಧರರ ಕ್ಷೇತ್ರದ ಅಭಿವೃದ್ಧಿಗೆ ನಾನೇ ಬದ್ಧ: ಕೆ.ಎಂ. ಸುರೇಶ್
ಬೇತಮಂಗಲ: ಆಗ್ನೇಯ ಪದವೀಧರರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರು ಕೆಜಿಎಫ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟದ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣೆಯಲ್ಲಿ ಜಯಗಳಿಸಿದ ನಂತರ ವಿಧಾನ ಪರಿಷತ್‌ನಲ್ಲಿ ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಸುರೇಶ್ ಅವರು, ಪ್ರಸ್ತುತ ಸರ್ಕಾರವು ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ ಮತ್ತು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ತೀವ್ರವಾಗಿ ಟೀಕಿಸಿದರು.
ಪದವೀಧರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಎನ್.ಡಿ.ಎ ಮೈತ್ರಿಕೂಟದ ಬೆಂಬಲ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
ತಮ್ಮ ಪ್ರಣಾಳಿಕೆಯ ಭಾಗವಾಗಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದ ಅವರು, ಐದು ಜಿಲ್ಲೆಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ವಂತ ಖರ್ಚಿನಲ್ಲಿ 'ಇ-ಲೈಬ್ರರಿ' ಸ್ಥಾಪನೆ ಮಾಡುವುದಾಗಿ ಘೋಷಿಸಿದರು.
ಅಲ್ಲದೆ, ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವತ್ತ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಕ್ಷೇತ್ರಾದ್ಯಂತ ಸಂಚರಿಸುತ್ತಿರುವಾಗ ಕಾರ್ಯಕರ್ತರು ಮತ್ತು ಪದವೀಧರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಸಂತಸ ಹಂಚಿಕೊಂಡ ಅವರು, ಇದು ವ್ಯಕ್ತಿಗತವಾಗಿರದೆ ಸಂಘಟನೆಯ ಶಕ್ತಿಯ ಮೇಲೆ ನಡೆಯುತ್ತಿರುವ ಚುನಾವಣೆಯಾಗಿದೆ. ಈ ಮಹತ್ವದ ಹೋರಾಟದಲ್ಲಿ ಎಲ್ಲರ ಸಹಕಾರ ಕೋರುತ್ತೇನೆ ಎಂದು ಕೆ.ಎಂ. ಸುರೇಶ್ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಭಾವಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
What's Your Reaction?