ಮುದ್ದೇಬಿಹಾಳದ ಐಟಿಐ ಸಂಸ್ಥಾಪಕ ನೆರಬೆಂಚಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಮುದ್ದೇಬಿಹಾಳ: ವೃತ್ತಿಪರ ತರಬೇತಿ (ಐಟಿಐ) ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಪಟ್ಟಣದ ಬಿಬಿಆರ್ ಐಟಿಐ ಸಂಸ್ಥೆಯ ಸಂಸ್ಥಾಪಕ ಎಸ್.ಎಂ. ನೆರಬೆಂಚಿ ಅವರಿಗೆ ಜಿಲ್ಲಾಡಳಿತದಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸುಮಾರು ಎರಡೂವರೆ ದಶಕಗಳ ಹಿಂದೆ ಮುದ್ದೇಬಿಹಾಳ ಪಟ್ಟಣದಲ್ಲಿ ಬಿಬಿಆರ್ ಐಟಿಐ ಕಾಲೇಜು ಸ್ಥಾಪಿಸುವ ಮೂಲಕ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕಾಗಿ ದೂರದ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆಯನ್ನು ನಿವಾರಿಸಿದ್ದಾರೆ. ಸ್ಥಳೀಯವಾಗಿಯೇ ಗುಣಮಟ್ಟದ ತಾಂತ್ರಿಕ ಶಿಕ್ಷಣ ಮತ್ತು ಕೌಶಲ್ಯ ತರಬೇತಿ ಪಡೆಯಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಇವರ ಸಂಸ್ಥೆಯಲ್ಲಿ ಇದುವರೆಗೆ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ವೃತ್ತಿಪರ ಕೌಶಲ್ಯ ತರಬೇತಿ ಪಡೆದಿದ್ದಾರೆ. ತರಬೇತಿ ಪಡೆದ ಅನೇಕ ಯುವಕ-ಯುವತಿಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಂಡಿದ್ದಾರೆ. ಈ ಮೂಲಕ ಐಟಿಐ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಅಲ್ಲದೆ, ಎಸ್.ಎಂ. ನೆರಬೆಂಚಿ ಅವರು ರಾಜ್ಯ ಖಾಸಗಿ ಐಟಿಐ ಕಾಲೇಜುಗಳ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ವೃತ್ತಿಪರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ಅವರ ಶೈಕ್ಷಣಿಕ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ನವೆಂಬರ್ 1ರಂದು ನಡೆದ ಜಿಲ್ಲಾ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.