ಬರ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳಿಗೆ ಶಾಸಕಿ ರೂಪಕಲಾ ಶಶಿಧರ್ ಸೂಚನೆ

ಬರ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳಿಗೆ ಶಾಸಕಿ ರೂಪಕಲಾ ಶಶಿಧರ್ ಸೂಚನೆ

      ಕೆಜಿಎಫ್: ಕೆಜಿಎಫ್ ತಾಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನರ ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಶಾಸಕಿ ರೂಪಕಲಾ ಶಶಿಧರ್ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಬರ ಪರಿಸ್ಥಿತಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರತಿಯೊಂದು ಗ್ರಾಮಕ್ಕೂ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಮೂಲಭೂತ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ವಿಶೇಷವಾಗಿ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳನ್ನು ಗುರುತಿಸಿ, ಯಾವುದೇ ವಿಳಂಬವಿಲ್ಲದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿನ ಚರಂಡಿಗಳನ್ನು ಸಕಾಲದಲ್ಲಿ ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಪಿಂಚಣಿ ಅದಾಲತ್‌ಗಳನ್ನು ಆಯೋಜಿಸಿ ಅರ್ಹ ಫಲಾನುಭವಿಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹರಿಸಬೇಕು. ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದನಾಶೀಲವಾಗಿ ನಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ಸರ್ಕಾರಿ ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ಸೌಜನ್ಯದಿಂದ ಅವರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಶಾಸಕಿ ಸೂಚಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳ ನೀರಿನ ಅಗತ್ಯತೆಯನ್ನು ಸಮರ್ಪಕವಾಗಿ ಅಂದಾಜಿಸಿ, ಅಗತ್ಯವಿರುವ ಕಡೆಗಳಲ್ಲಿ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಮರುಕಳಿಸದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕೆಜಿಎಫ್ ತಾಲೂಕಿಗೆ ಮುಂದಿನ ದಿನಗಳಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಬೇತಮಂಗಲ ಹಾಗೂ ರಾಮಸಾಗರ ಕೆರೆಗಳ ನೀರನ್ನು ಕೆಜಿಎಫ್ ನಗರಕ್ಕೆ ತರುವ ಕುರಿತು ನೀರಾವರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಸಾಕಾರಗೊಳಿಸುವ ಮೂಲಕ ತಾಲೂಕಿನ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕಿ ರೂಪಕಲಾ ಶಶಿಧರ್ ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಗಾಯತ್ರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶಪ್ಪ, ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಧರ್ಮೇಂದ್ರ, ಕೆಡಿಎ ಅಧ್ಯಕ್ಷ ಶ್ರೀನಿವಾಸನ್, ಬೆಸ್ಕಾಂ ಅಧಿಕಾರಿ ಹೇಮಲತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.