ಸುದ್ದಿಕಿರಣ ವರದಿ
ಸೋಮವಾರ, ಮೇ 9
ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಆಯ್ಕೆ
ಉಡುಪಿ: ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ| ರತ್ನಾಕರ ಸಿ. ಕುನುಗೋಡು ಅವರ ಎದೆ ನೆಲದ ಕಾವು ಅಪ್ರಕಟಿತ ಕವನ ಸಂಕಲನ ಆಯ್ಕೆಯಾಗಿದೆ. ಪ್ರಶಸ್ತಿ 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.
ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿ ಹೀಗೆ ಕನ್ನಡ ಸಾರಸ್ವತ ಲೋಕದಲ್ಲಿ ಹೆಸರುವಾಸಿಯಾದ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ ಸಂಸ್ಥೆ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ಪ್ರಕಟಣೆ ತಿಳಿಸಿದೆ.
ಡಾ| ರತ್ನಾಕರ ಸಿ. ಕುನುಗೋಡು ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಎರೆಕೊಪ್ಪದವರು. ಶಿಕ್ಷಕರಾಗಿ, ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಸ್ತುತ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಾಹಿತ್ಯ, ರಂಗಭೂಮಿ, ಸಂಘಟನೆ, ಸಾಮಾಜಿಕ ಪರಿವರ್ತನೆಗಳತ್ತ ಒಲವು ಮೂಡಿಸಿಕೊಂಡು ಕ್ರಿಯಾಶೀಲರಾಗಿದ್ದಾರೆ. ಕವಿತೆಗಳು ಮತ್ತು ಸಂಶೋಧನಾ ಲೇಖನಗಳ ಬರಹಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.