Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ವೇತನ ಪಾವತಿಗೆ ಕ್ರಮ: ಶಾಸಕ ಭಟ್ ಸೂಚನೆ

ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ವೇತನ ಪಾವತಿಗೆ ಕ್ರಮ: ಶಾಸಕ ಭಟ್ ಸೂಚನೆ

ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ವೇತನ ಪಾವತಿಗೆ ಕ್ರಮ: ಶಾಸಕ ಭಟ್ ಸೂಚನೆ

(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳಿಗೆ ಸುವರ್ಣ ಆರೋಗ್ಯ ಟ್ರಸ್ಟ್ ಹಣದಿಂದ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ರಘುಪತಿ ಭಟ್ ಸೂಚನೆ ನೀಡಿದರು.

ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ಜಿಲ್ಲಾಸ್ಪತ್ರೆಗೆ ಪಾವತಿಯಾಗಲು ಬಾಕಿ ಇರುವ ಹಣವನ್ನು ತಕ್ಷಣ ಮಂಜೂರುಗೊಳಿಸಲು ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಶಾಸಕ ಭಟ್ ತಿಳಿಸಿದರು. ಈ ಮೊತ್ತ ಮಂಜೂರಾದ ತಕ್ಷಣ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ವೇತನ ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ವೇತನ ಪಾವತಿಸದೇ ಇರುವ ಬಗ್ಗೆ ಹಾಗೂ ಇತರ ಸಮಸ್ಯೆ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಭೆ ನಡೆಸಿ ಚರ್ಚಿಸಿದರು.

ಮುಖ್ಯಮಂತ್ರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಲ್ಲಿ ಈ ಬಗ್ಗೆ ಸಭೆ ನಡೆಸಿ ಬಾಕಿ ಇರುವ ಎಲ್ಲಾ ವೇತನ ಸರ್ಕಾರದಿಂದ ಪಾವತಿಸಲು ಸೂಕ್ತ ಕ್ರಮ ಜರುಗಿಸುವ ಭರವಸೆ ನೀಡಿದ ಶಾಸಕ ಭಟ್, ಈ ತಿಂಗಳ 11ರಿಂದ ನಡೆಸಲುದ್ದೇಶಿಸಿರುವ ಮುಷ್ಕರ ಕೈಬಿಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಧುಸೂದನ ನಾಯಕ್, ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!