Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಏಡ್ಸ್ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ಏಡ್ಸ್ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ಉಡುಪಿ: ಏಡ್ಸ್ ತಡೆ ಮತ್ತು ಹರಡುವಿಕೆ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ನಗರದ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ರೆಡ್ ಕ್ರಾಸ್ ಮತ್ತು ಎನ್.ಎಸ್.ಎಸ್. ಘಟಕ ಉದ್ಯಾವರ, ನಾಗರಿಕ ಸಹಾಯವಾಣಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಹಾಗೂ ಉದ್ಭವ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಎಚ್.ಐ.ವಿ. ಸೋಂಕು ತಡೆಗಾಗಿ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಘೋಷವಾಕ್ಯದೊಂದಿಗೆ ಮಂಗಳವಾರ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆ, ಏಡ್ಸ್ ನಿಯಂತ್ರಣದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಎಚ್.ಐ.ವಿ. ಸೋಂಕಿನ ಬಗ್ಗೆ ಜನಸಾಮಾನ್ಯರಲ್ಲಿ ಆರೋಗ್ಯದ ತಿಳುವಳಿಕೆ ಮತ್ತು ಕೊರತೆ ಇದ್ದು, ಸಾರ್ವಜನಿಕರಲ್ಲಿ ಏಡ್ಸ್ ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸಿ, ಏಡ್ಸ್ ಗೆ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಬೇಕು ಎಂದರು.
ಎಚ್.ಐ.ವಿ. ಬಾಧಿತರನ್ನು ತಾರತಮ್ಯ ಮಾಡದೇ ಗೌರವದಿಂದ ಕಾಣಬೇಕು. ಎಚ್.ಐ.ವಿ. ಬಾಧಿತರಿಗೆ ಸರಕಾರದಿಂದ ಅನೇಕ ಸೌಲಭ್ಯ ದೊರೆಯುತ್ತಿದ್ದು, ಆ ಬಗ್ಗೆ ತಿಳುವಳಿಕೆ ನೀಡಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವಂತಾಗಬೇಕು ಎಂದರು.
ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಚ್.ಐ.ವಿ. ವೈರಸ್ ಮೂಲಕ ಹರಡುವ ರೋಗವಾಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹಂತ ಹಂತವಾಗಿ ನಾಶಗೊಳಿಸುವುದರಿಂದ ವಿವಿಧ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆಗ ರೋಗದ ಸ್ಥಿತಿಗತಿ ತಿಳಿಯಲು ಸಾಧ್ಯವಾಗುತ್ತದೆ. ಎಚ್.ಐ.ವಿ. ಏಡ್ಸ್ ಕುರಿತು ಈಚಿನ ದಿನಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಆರೋಗ್ಯಕರ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕಾನೂನಿನಡಿ ಏಡ್ಸ್ ಬಾಧಿತರಿಗೆ ಗೌಪ್ಯತೆಯ ಹಕ್ಕು ನೀಡಲಾಗಿದ್ದು, ಎಚ್.ಐ.ವಿ. ಏಡ್ಸ್ಗೆ ತುತ್ತಾಗಿರುವ ವ್ಯಕ್ತಿಗೆ ಸಾರ್ವಜನಿಕ ಕ್ಷೇತ್ರ ಅಥವಾ ಖಾಸಗಿ ಕ್ಷೇತ್ರದಲ್ಲಿ ತಾರತಮ್ಯವಾಗಿದ್ದರೆ ಕಾನೂನು ರಕ್ಷಣೆಗೆ ಕ್ರಮ ಕೈಗೊಳ್ಳಬಹುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರಚಂದ್ರ ಸೂಡ, ಏಡ್ಸ್ ಸೋಂಕಿತರಿಗೆ ಮಾನಸಿಕ ಮತ್ತು ಆರ್ಥಿಕ ಬೆಂಬಲ ನೀಡುವುದು ಅಗತ್ಯ. ಏಡ್ಸ್ ಕುರಿತು ಜಾಗೃತಿ ಮೂಡಿಸಲು ಕಾಲೇಜುಗಳಲ್ಲಿ ಜನಜಾಗೃತಿ ಆಂದೋಲನ ಕಾರ್ಯಕ್ರಮ ನಡೆಯುತ್ತಿದ್ದು, ವಿದ್ಯಾರ್ಥಿಗಳು ದುಷ್ಚಟಗಳಿಗೆ ಬಲಿಯಾಗದೇ ಉತ್ತಮ ಆರೋಗ್ಯ ರೂಪಿಸಿಕೊಳ್ಳಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿರುವ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮದ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.
ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಡಾ. ಪ್ರಶಾಂತ ಭಟ್ ಮೊದಲಾದವರಿದ್ದರು. ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ ಸ್ವಾಗತಿಸಿ, ಮೇಲ್ವಿಚಾರಕ ಮಹಾಬಲೇಶ್ವರ ಎನ್. ವಂದಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಸರ್ವಿಸ್ ಬಸ್ ನಿಲ್ದಾಣದಿಂದ ಕೆ.ಎಂ. ಮಾರ್ಗವಾಗಿ ಪುರಭವನ ವರೆಗೆ ನಡೆದ ಜಾಥಾವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಕಾವೇರಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!