Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ನವೆಂಬರ್ ನಿಂದ ಪಡಿತರ ಕೆಂಪು ಕುಚ್ಚಲಕ್ಕಿ ವಿತರಣೆ

ನವೆಂಬರ್ ನಿಂದ ಪಡಿತರ ಕೆಂಪು ಕುಚ್ಚಲಕ್ಕಿ ವಿತರಣೆ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪಡಿತರದಾರರಿಗೆ ನವೆಂಬರ್ ನಿಂದ ಸ್ಥಳೀಯ ಕೆಂಪು ಕುಚ್ಚಲಕ್ಕಿ ಸರಬರಾಜು ಮಾಡಲಾಗುವುದು ಎಂದು ಧಾರ್ಮಿಕ ದತ್ತಿ ಹಾಗೂ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತಳೆಯಲಾಗಿದೆ ಎಂದು ಸಚಿವ ಕೋಟ ತಿಳಿಸಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸುವಂತೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವದ ನಿರ್ಣಯ ತಳೆಯಿತು.

ಅವಳಿ ಜಿಲ್ಲೆಗಳಿಗೆ ವಾರ್ಷಿಕ ಸುಮಾರು 12 ಲಕ್ಷ ಕ್ವಿಂಟಾಲ್ ಕೆಂಪು ಕುಚ್ಚಲಕ್ಕಿ ಅಗತ್ಯವಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ ಎಂಓ 4, ಜಯ, ಅಭಿಲಾಷಾ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ಸುದೀರ್ಘ ಚರ್ಚೆ ನಡೆಸಿ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಂಡಿತು.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆ ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದ್ದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು.

ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾಗಿ ಪೂರೈಕೆ ಆಗಬಹುದಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ ಇತರ ಜಿಲ್ಲೆಗಳಿಂದ ಭತ್ತ ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ನಿಗಮ ನಿಯಮಿತ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!