Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಮನೆ ಆರೈಕೆಯಲ್ಲಿರುವ ಸೋಂಕಿತರ ಕೈಗೆ ಸೀಲ್ ಹಾಕಲು ಸಲಹೆ

ಮನೆ ಆರೈಕೆಯಲ್ಲಿರುವ ಸೋಂಕಿತರ ಕೈಗೆ ಸೀಲ್ ಹಾಕಲು ಸಲಹೆ

ಉಡುಪಿ: ಕೋವಿಡ್ ಪಾಸಿಟಿವ್ ವರದಿ ಬಂದು ಮನೆ ಆರೈಕೆ (ಹೋಂ ಐಸೋಲೇಷನ್)ಯಲ್ಲಿರುವವರು ಅನಗತ್ಯವಾಗಿ ಮನೆಯಿಂದ ಹೊರಬಂದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಿ, ಆರೋಗ್ಯವಂತರಿಗೆ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ ಹೋಂ ಐಸೋಲೇಷನ್ ನಲ್ಲಿರುವವರನ್ನು ಗುರುತಿಸಲು ಸಾಧ್ಯವಾಗುವಂತೆ ಅವರ ಕೈಗೆ ಸೀಲ್ ಹಾಕುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ. ಟಿ. ರೇಜು ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮನೆ ಆರೈಕೆಯಲ್ಲಿರುವವರು ನಿಯಮ ಉಲ್ಲಂಘಿಸುತ್ತಿರುವ ಬಗ್ಗೆ ದೂರು ಬಂದಿರುವುದಾಗಿ ಜಿಲ್ಲಾಧಿಕಾರಿ ಸಭೆಯ ಗಮನಕ್ಕೆ ತಂದರು. ಸೋಂಕಿತರು ಮನೆಯಿಂದ ಹೊರಬಾರದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಡಾ. ರೇಜು ಸೂಚಿಸಿದರು.

ಕೋವಿಡ್ ಪರೀಕ್ಷಾ ವರದಿಯನ್ನು ವಿಳಂಬಕ್ಕೆ ಆಸ್ಪದ ನೀಡದೆ ಕಾಲಮಿತಿಯೊಳಗೆ ನೀಡಿ, ಗ್ರಾಮೀಣ ಪ್ರದೇಶಗಳಿಂದ ಸಂಗ್ರಹಿಸುವ ಪರೀಕ್ಷಾ ಮಾದರಿ ಆದಷ್ಟು ಶೀಘ್ರದಲ್ಲಿ ಸಂಗ್ರಹಿಸಿ ಎಂದರು.

ಜಿಲ್ಲೆಯ ಆಸ್ಪತ್ರೆಗಳಲ್ಲಿನ ಬೆಡ್ ಸೌಲಭ್ಯ ಕುರಿತು ರೂಪಿಸಿರುವ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ರೇಜು, ಆಸ್ಪತ್ರೆಗಳಲ್ಲಿ ಆಕ್ಸಿಜಿನ್ ಪೋಲಾಗದಂತೆ ಕೈಗೊಂಡಿರುವ ಕ್ರಮವನ್ನು ಶ್ಲಾಘಿಸಿ, ಜಿಲ್ಲೆಗೆ ಅಗತ್ಯವಿರುವ ಹೆಚ್ಚುವರಿ ಆಕ್ಸಿಜನ್ ಪೂರೈಕೆ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಎಲ್ಲಾ ಹೆಲ್ತ್ ಕೇರ್ ವರ್ಕರ್ ಮತ್ತು ಫ್ರಂಟ್ ಲೈನ್ ವರ್ಕರ್ ಗಳು ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಹೆಚ್ಚಿನ ಶ್ರಮ ವಹಿಸಿ ಕರ್ತವ್ಯ ನಿರ್ವಹಿಸುವಂತೆ ರೇಜು ವಿನಂತಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ.ಪಂ. ಸಿಇಓ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಡಿಎಚ್.ಓ ಡಾ. ಸುಧೀರಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಪ್ರಶಾಂತ ಭಟ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!