ಸುದ್ದಿಕಿರಣ ವರದಿ
ಶುಕ್ರವಾರ, ಮೇ 27
ಬಿಜೆಪಿಯಿಂದ ಭ್ರಷ್ಟಾಚಾರ ಪೋಷಣೆ
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬಹುದೊಡ್ಡ ಅವ್ಯವಹಾರ ನಡೆದಿದೆ. ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಕರಾವಳಿ ಜಿಲ್ಲೆಗಳ ಉಸ್ತುವಾರಿ ಕೆ. ಮಥಾಯ್ ಆರೋಪಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ಸಹಿಸುವುದಿಲ್ಲ. ಅವ್ಯವಹಾರ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ, ಬದಲಾಗಿ ಬಿಜೆಪಿ ಭ್ರಷ್ಟಾಚಾರವನ್ನು ಬೆಂಬಲಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಧರ್ಮ- ಧರ್ಮಗಳ ನಡುವೆ ದ್ವೇಷ ಹುಟ್ಟಿಹಾಕುತ್ತಿದ್ದು, ದೇಶವನ್ನು ಒಡೆಯುವ ಕೆಲಸ ಮಾಡುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಭಾರತ, ಶ್ರೀಲಂಕಾದ ಹಾದಿ ಹಿಡಿಯಲಿದೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸರ್ಕಾರದ ಮೇಲೆಯೇ ಹಿಡಿತ ಇಲ್ಲದಂತಾಗಿದೆ. ರಾಜ್ಯವನ್ನು ಲೂಟಿ ಮಾಡಲು ಗುತ್ತಿಗೆ ಕೊಡಲಾಗಿದೆ ಎಂದು ಮಥಾಯ್ ಆರೋಪಿಸಿದರು.
ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ದಿವಾಕರ ಸನಿಲ್ ಮಾತನಾಡಿ, ವಾರಾಹಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ದಶಕಗಳು ಕಳೆದರೂ ಪೂರ್ಣಗೊಂಡಿಲ್ಲ. ಉಡುಪಿ ನಗರದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲ. ಪ್ರವಾಸೋದ್ಯಮವನ್ನು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಂಡಿಲ್ಲ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷ ಪ್ರಮುಖರಾದ ಸಂತೋಷ್ ಕಾಮತ್, ಎಸ್. ಆರ್. ಲೋಬೊ, ಆಶ್ಲಿ ಕರ್ನೇಲಿಯೊ ಇದ್ದರು