Wednesday, August 10, 2022
Home ಸಮಾಚಾರ ಜಿಲ್ಲಾ ಸುದ್ದಿ ಜ. 10ರಿಂದ ಜಿಲ್ಲೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಡೋಸ್

ಜ. 10ರಿಂದ ಜಿಲ್ಲೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಡೋಸ್

ಸುದ್ದಿಕಿರಣ ವರದಿ
ಶನಿವಾರ, ಜನವರಿ 8, 2022

ಜ. 10ರಿಂದ ಜಿಲ್ಲೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಡೋಸ್
ಉಡುಪಿ: ಜಿಲ್ಲೆಯ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷಕ್ಕೂ ಮೇಲ್ಪಟ್ಟ, ಅಸ್ವಸ್ಥತೆ ಹೊಂದಿರುವವರಿಗೆ ಈ ತಿಂಗಳ 10ರಿಂದ ಕೋವಿಡ್ 19 ಮುನ್ನೆಚ್ಚರಿಕೆ ಡೋಸ್ ನೀಡಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು.

ಶನಿವಾರ ವರ್ಚುವಲ್ ಸಭೆ ಮೂಲಕ ಮಾಹಿತಿ ನೀಡಿದರು.

ಜಿಲ್ಲೆಯಲಿ ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದನ್ನು ನಿಯಂತ್ರಿಸಲು ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ತಗುಲದಂತೆ ಹೆಚ್ಚಿನ ರಕ್ಷಣೆ ನೀಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಡೋಸ್ ನೀಡಲು ಸರ್ಕಾರ ನಿರ್ಧರಿಸಿದೆ.

ಕೋವಿಡ್ ಮೊದಲ ಡೋಸ್ ಪಡೆದು 9 ತಿಂಗಳು ಪೂರೈಸಿದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ಪ್ರತ್ಯೇಕ ಲಸಿಕೆ ಕೇಂದ್ರ
ಮುಂಚೂಣಿ ಕಾರ್ಯಕರ್ತರಾದ ಪೊಲೀಸ್ ಸಿಬ್ಬಂದಿ, ಕಂದಾಯ, ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳಿಗೆ ಅವರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಲಸಿಕೆ ಪಡೆಯಲು ಅನುಕೂಲವಾಗುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಒಂದೊಂದು ಪ್ರತ್ಯೇಕ ಲಸಿಕಾ ಕೇಂದ್ರ ತೆರೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಕೂರ್ಮರಾವ್, ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ನೌಕರರಿಗೆ ಮತ್ತು ಚಂದು ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಗೆ ವಿಶೇಷ ಲಸಿಕೆ ಕೇಂದ್ರ ತೆರೆಯುವಂತೆ ಹಾಗೂ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಅವರಿಗೆ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡಿ, ಲಸಿಕಾ ಕೇಂದ್ರಗಳ ವಿವರಗಳನ್ನು ಸಾಕಷ್ಟು ಮುಂಚಿತವಾಗಿ ತಿಳಿಸುವಂತೆ ತಿಳಿಸಿದರು.

ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿರುವ ಇಲಾಖೆ ಅಧಿಕಾರಿಗಳು ತಮ್ಮ ಎಲ್ಲಾ ಸಿಬ್ಬಂದಿಗೆ ಕೋವಿಡ್ 19 ಮುನ್ನೆಚ್ಚರಿಕೆ ಡೋಸ್ ಪಡೆಯುವ ಬಗ್ಗೆ ಮಾಹಿತಿ ನೀಡಿ, ಅವರು ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕು. ಅವರು ತಮ್ಮ ಸಮೀಪದ ಅನುಕೂಲವಾದ ಸ್ಥಳದಲ್ಲಿ ಲಸಿಕೆ ಪಡೆಯುವಂತೆ ತಿಳಿಸಬೇಕು. ಒಂದು ವಾರದ ಅವಧಿಯೊಳಗೆ ಜಿಲ್ಲೆಯ ಎಲ್ಲಾ ಅರ್ಹ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಸಂಪೂರ್ಣವಾಗಿ ಮುನ್ನೆಚ್ಚರಿಕೆ ಡೋಸ್ ಪಡೆಯುವಂತೆ ಗುರಿ ನಿಗದಿಪಡಿಸಿಕೊಂಡು, ಅದರಂತೆ ಯೋಜನೆ ರೂಪಿಸಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಸಮುಚಿತ ವರ್ತನೆಗಳಾದ ಮಾಸ್ಕ್ ಧರಿಸುವುದು ಮತ್ತು ವ್ಯಕ್ತಿಗತ ಅಂತರ ಪಾಲನೆ ಕುರಿತಂತೆ ಅಧಿಕಾರಿಗಳು ಅತ್ಯಂತ ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಸಮುಚಿತ ವರ್ತನೆಗಳ ಪಾಲನೆಯನ್ನು ಉಲ್ಲಂಘಿಸಿದವರಿಗೆ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ತಪಾಸಣೆ ನಡೆಸುವಂತೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಕಸ ವಿಲೇವಾರಿ ವಾಹನಗಳಲ್ಲಿ ಕೋವಿಡ್ ಸುರಕ್ಷಾ ಕ್ರಮಗಳ ಕುರಿತಂತೆ ಪ್ರತಿನಿತ್ಯ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುವಂತೆ ಹಾಗೂ ಎಲ್ಲಾ ಗ್ರಾಮೀಣ ಟಾಸ್ಕ್ ಫೋರ್ಸ್ ಗಳು ಮತ್ತು ವಾರ್ಡ್ ಮಟ್ಟದ ಟಾಸ್ಕ್ ಫೋರ್ಸ್ ಗಳು ತಮ್ಮ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿ.ಎಚ್.ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಕೋವಿಡ್ ಲಸಿಕೆ ಉಸ್ತುವಾರಿ ಡಾ. ಎಂ. ಜಿ. ರಾಮ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ. ಸತೀಶ್ಚಂದ್ರ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!