ಬಿ.ಆರ್.ಎಸ್. ಆಸ್ಪತ್ರೆ ವೇತನಕ್ಕಾಗಿ ಅನುದಾನ ಬಿಡುಗಡೆ
(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ಬಾಕಿ ಇರುವ ವೇತನ ಪಾವತಿಸುವ ಸಲುವಾಗಿ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ 50 ಲಕ್ಷ ರೂ. ಬಿಡುಗಡೆಯಾಗಿದೆ.
ಈಚೆಗೆ ಶಾಸಕ ಕೆ. ರಘುಪತಿ ಭಟ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೊತೆ ಸಭೆ ನಡೆಸಿ ಚರ್ಚಿಸಿರುವ ಫಲವಾಗಿ ಈ ಹಣ ಬಿಡುಗಡೆಗೊಳಿಸಲಾಗಿದೆ.
ಶನಿವಾರ ಶಾಸಕ ಭಟ್ ಉಪಸ್ಥಿತಿಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಧುಸೂದನ್ ನಾಯಕ್ ಅವರು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಿ, ಕೂಡಲೇ ವೇತನ ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಚಂದ್ರಶೇಖರ್ ಅಡಿಗ ಹಾಗೂ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.