Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸರ್ವ ಪಕ್ಷಗಳ ಮುಖಂಡರ ಸಭೆ ಕರೆಯಲು ಆಗ್ರಹ

ಸರ್ವ ಪಕ್ಷಗಳ ಮುಖಂಡರ ಸಭೆ ಕರೆಯಲು ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪೀಡಿತರು ಹಾಗೂ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದ್ದು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ವೈದ್ಯರು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಆದರೂ, ಪರಿಸ್ಥಿತಿ ನಿಯಂತ್ರಣ ಕುರಿತು ಸರ್ವ ಪಕ್ಷಗಳ ಮುಖಂಡರ ಸಭೆ ಕರೆಯದ ಜಿಲ್ಲಾಡಳಿತದ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್, ಕೂಡಲೇ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ನೇತೃತ್ವದಲ್ಲಿ ತೆರಳಿದ ಕಾಂಗ್ರೆಸ್ ನಿಯೋಗ ಶುಕ್ರವಾರ ಜಿಲ್ಲಾಧಿಕಾರಿ ಜಿ. ಜಗದೀಶ ಅವರಿಗೆ ಮನವಿ ಸಲ್ಲಿಸಿದರು.

ಕಾಪು ತಾಲೂಕಿನಲ್ಲಿರುವ ಸರಕಾರಿ ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತ ಮಟ್ಟಕ್ಕೆ ಏರಿಸಿ ಅಗತ್ಯ ವೈದ್ಯಕೀಯ ಸಿಬಂದಿ ನಿಯೋಜಿಸುವಂತೆ ಸೊರಕೆ ಆಗ್ರಹಿಸಿದರು.

ತೆಂಕ ಎರ್ಮಾಳಿನಲ್ಲಿರುವ ರಾಜೀವ ಗಾಂಧಿ ಪೊಲಿಟಿಕಲ್ ಅಕಾಡೆಮಿ ಕಟ್ಟಡವನ್ನು ಅಗತ್ಯ ಬಿದ್ದಲ್ಲಿ ಕೋವಿಡ್ ಸೋಂಕಿತರ ಶುಶ್ರೂಷೆಗೆ ಉಚಿತವಾಗಿ ನೀಡುವುದಾಗಿ ಅಶೋಕ ಕುಮಾರ್ ಕೊಡವೂರು ತಿಳಿಸಿದರು.

ವ್ಯಾಕ್ಸಿನ್ ಲಭ್ಯತೆ ಬಗೆಗಿನ ಗೊಂದಲ ಸರಿಪಡಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಆಮ್ಲಜನಕ ಮಟ್ಟ ಪರೀಕ್ಷಿಸುವ ಆಕ್ಸಿಮೀಟರ್ ನೀಡಬೇಕು ಎಂದೂ ಮನವಿಯಲ್ಲಿ ಆಗ್ರಹಿಸಲಾಯಿತು.

ಕೆ.ಪಿ.ಸಿ.ಸಿ. ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಕೆ.ಪಿ.ಸಿ.ಸಿ. ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೊ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ ಜತ್ತನ್ನ, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಡಾ. ಸುನೀತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!