Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಬಲಾಯಿಪಾದೆಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಸೂಚನೆ

ಬಲಾಯಿಪಾದೆಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಸೂಚನೆ

ಉಡುಪಿ: ಬಲಾಯಿಪಾದೆ ಜಂಕ್ಷನ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತ ಸಂಭವಿಸುತ್ತಿರುವುದರಿಂದ ಅಲ್ಲಿ ಸ್ಥಳೀಯ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಆದಷ್ಟು ಶೀಘ್ರದಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಉಡುಪಿಯಿಂದ ಬಲಾಯಿಪಾದೆ ಹಾಗೂ ಉದ್ಯಾವರಕ್ಕೆ ತೆರಳುವ ಮಾರ್ಗದಲ್ಲಿ ಸರ್ವಿಸ್ ರಸ್ತೆ ಇಲ್ಲದ ಕಾರಣ ಹೆಚ್ಚಿನ ವಾಹನ ದಟ್ಟಣೆ ಉಂಟಾಗುವ ಜೊತೆಗೆ ವಾಹನ ಸವಾರರು ರಾಂಗ್ ರೂಟ್ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಚರಿಸುತ್ತಿದ್ದು, ಅದರಿಂದ ಆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತ ಸಂಭವಿಸುತ್ತಿದೆ ಎಂದರು.

ಕರಾವಳಿ ಜಂಕ್ಷನ್, ಕಟಪಾಡಿ ಹಾಗೂ ಅಂಬಾಗಿಲು- ಸಂತೆಕಟ್ಟೆ ಜಂಕ್ಷನ್ ಗಳಲ್ಲಿಯೂ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಆ ಜಂಕ್ಷನ್ ಗಳಲ್ಲಿ ಅರ್ಧಕ್ಕೆ ನಿಲ್ಲಿಸಿದ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಎನ್.ಎಚ್. ಅಧಿಕಾರಿಗಳಿಗೆ ಸೂಚಿಸಿದರು.

ಮಳೆಯ ಕಾರಣದಿಂದ ಕುಂದಾಪುರ ಶಾಸ್ತ್ರೀ ಸರ್ಕಲ್, ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜು ಮತ್ತು ಮಹೇಶ್ ಆಸ್ಪತ್ರೆ ಬಳಿ ಹಾಗೂ ಬಾರ್ಕೂರು ಕ್ರಾಸ್ ಗಳಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ ಪರಿಣಾಮವಾಗಿ ಆ ಪ್ರದೇಶದಲ್ಲಿ ಅಪಘಾತ ಸಂಭವಿಸುತ್ತಿರುವುದರಿಂದ ಅಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆಯಲ್ಲಿ ಬೀದಿದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಆದಷ್ಟು ಶೀಘ್ರವಾಗಿ ಅವುಗಳನನ್ನು ದುರಸ್ತಿ ಮಾಡುವಂತೆ ಹಾಗೂ ಅಪೂರ್ಣಗೊಂಡ ಪಡುಬಿದ್ರೆ ಸರ್ವಿಸ್ ರೋಡ್ ಕಾಮಗಾರಿ ತಕ್ಷಣ ಕೈಗೊಂಡು ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಬಹುದಾದ ಹೊಸ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ, ಅದರ ವಿವರಗಳನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿ, ಆ ಪ್ರದೇಶಗಳ ಜಂಟಿ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರಚಂದ್ರ, ಕುಂದಾಪುರ ಸಹಾಯಕ ಕಮೀಷನರ್ ಕೆ. ರಾಜು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಶಿಶುಮೋಹನ್ ಅರುಣ್, ಎನ್.ಎಚ್.ಎ. ಅಧಿಕಾರಿಗಳು ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!