Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಸರ್ವರ ಸಹಭಾಗಿತ್ವದೊಂದಿಗೆ ಹರ್ ಘರ್ ತಿರಂಗ ಅಭಿಯಾನ

ಸರ್ವರ ಸಹಭಾಗಿತ್ವದೊಂದಿಗೆ ಹರ್ ಘರ್ ತಿರಂಗ ಅಭಿಯಾನ

ಸುದ್ದಿಕಿರಣ ವರದಿ
ಮಂಗಳವಾರ, ಆಗಸ್ಟ್ 2

ಸರ್ವರ ಸಹಭಾಗಿತ್ವದೊಂದಿಗೆ ಹರ್ ಘರ್ ತಿರಂಗ ಅಭಿಯಾನ
ಉಡುಪಿ: ದೇಶದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪ್ರತೀ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಸಬೇಕು. ಅದೇ ರೀತಿ ಜಿಲ್ಲೆ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಹಾಗೂ ಮುಂದೆ ಆಗಬೇಕಿರುವ ಕಾರ್ಯಗಳ ಕುರಿತ ಅವಲೋಕನ ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಹರ್ ಘರ್ ತಿರಂಗ ಅಭಿಯಾನ ಮತ್ತು ಉಡುಪಿ ಜಿಲ್ಲೆಯ ರಜತ ಮಹೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸ್ಮರಣೀಯವಾದ ಅವಧಿಯಲ್ಲಿ ಆಗಸ್ಟ್ 13ರಿಂದ 15ರ ವರೆಗೆ ಹಗಲು ರಾತ್ರಿ 3 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ರಾರಾಜಿಸಬೇಕು. ಆ ಮೂಲಕ ಎಲ್ಲಾ ಪ್ರಜೆಗಳಲ್ಲೂ ರಾಷ್ಟ್ರಪ್ರೇಮ ಹಾಗೂ ರಾಷ್ಟ್ರಭಕ್ತಿ ಇಮ್ಮಡಿಗೊಳಿಸಲು ಅಭಿಯಾನ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಒಟ್ಟು 2,72,000 ಮನೆ, 1 ಲಕ್ಷಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ 4 ಲಕ್ಷಕ್ಕೂ ಹೆಚ್ಚು ಕಟ್ಟಡಗಳಿದ್ದು, ಪ್ರತಿಯೊಂದೂ ಕಟ್ಟಡಗಳ ಮೇಲೆಯೂ ತ್ರಿವರ್ಣ ಧ್ವಜ ಹಾರಿಸುವ ಹಿನ್ನೆಲೆಯಲ್ಲಿ ಅಗತ್ಯಕ್ಕನುಗುಣವಾಗಿ ಸಾರ್ವಜನಿಕರಿಗೆ ತ್ರಿವರ್ಣ ಧ್ವಜಗಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ರಜತ ಮಹೋತ್ಸವ
ಈ ತಿಂಗಳ 25ರಂದು ಉಡುಪಿ ಜಿಲ್ಲೆ ಘೋಷಣೆಯಾಗಿ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಯೋಜಿಸುವುದರೊಂದಿಗೆ ಅಂದಿನ ಹಾಗೂ ಇಂದಿನ ಉಡುಪಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಪುನರಾವಲೋಕನ ಹಾಗೂ ಮುಂಬರುವ ದಿನಗಳಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಕುರಿತ ಸಾಧಕ ಬಾಧಕಗಳು, ಜನಸಾಮಾನ್ಯರ ಆಶೋತ್ತರಗಳನ್ನು ಕ್ರೋಢೀಕರಿಸುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಬೇಕು ಎಂದರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿ, ರಾಷ್ಟ್ರ ಧ್ವಜವನ್ನು 3 ದಿನಗಳ ಅವಧಿಯಲ್ಲಿ ರಾಜ್ಯಾದ್ಯಂತ ಸುಮಾರು 3 ಕೋಟಿಗೂ ಹೆಚ್ಚು ಮನೆಗಳ ಮೇಲೆ ಹಾರಿಸಿ ದೇಶಪ್ರೇಮ ಮೆರೆಯುವುದರೊಂದಿಗೆ ತ್ರಿವರ್ಣ ಧ್ವಜ ಹಾರಿಸುವ ಹರ್ ಘರ್ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲೆಯ ರಜತ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸ್ಕೃತಿ ಹಾಗೂ ಪರಂಪರೆ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಯುವಜನರಲ್ಲಿ ಸದೃಢ ಭಾರತ ನಿರ್ಮಾಣ ಕುರಿತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ ಮಂಡಲಗಳ ಸಹಭಾಗಿತ್ವದಲ್ಲಿ ನಡೆಸಬೇಕು ಎಂದರು.

ರಾಜ್ಯ ಮಟ್ಟದ ಕೃಷ್ಣ ಜಯಂತಿ
ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉಡುಪಿಯಲ್ಲಿ ನಡೆಸಲಾಗುತ್ತಿದ್ದು, ಆ. 19ರಂದು ಕೃಷ್ಣಮಠ ರಾಜಾಂಗಣದಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು.

ಕಾರ್ಯಕ್ರಮದಂಗವಾಗಿ ಶ್ರೀಕೃಷ್ಣನ ಕುರಿತು ನೃತ್ಯ ರೂಪಕಗಳು, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ, ಹುಲಿವೇಷ ಸ್ಪರ್ಧೆ ಆಯೋಜಿಸಲಾಗುವುದು. ಶ್ರೀಕೃಷ್ಣನ ಕುರಿತು ವಿದ್ವಾಂಸರಿಂದ ಉಪನ್ಯಾಸ ಆಯೋಜಿಸಲಾಗುವುದು ಎಂದರು.

ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಹಾಗೂ ಸ್ವಾಮೀಜಿಗಳನ್ನು ಆಹ್ವಾನಿಸಲಾಗುವುದು ಎಂದ ಸಚಿವ ಅಂಗಾರ, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಕೆ. ರಘುಪತಿ ಭಟ್ ಮತ್ತು ಲಾಲಾಜಿ ಆರ್. ಮೆಂಡನ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ವಿವಿಧ ಇಲಾಖೆಯ ಅಧಿಕಾರಿಗಳು ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!