Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ

ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ

ಉಡುಪಿ: ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಖಾಸಗಿ ಶಾಲಾ ಬಸ್ ಗಳಲ್ಲಿ ಮಕ್ಕಳಿಗೆ ಸ್ಪಷ್ಟವಾಗಿ ಕಾಣುವಂತೆ ಚೈಲ್ಡ್ ಲೈನ್ ಸಂಖ್ಯೆ 1098 ಮಾಹಿತಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಈ ಕುರಿತಂತೆ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ಬಸ್ ಗಳಲ್ಲಿ ಚೈಲ್ಡ್ ಲೈನ್ 1098ರ ಮಾಹಿತಿ ನೀಡಬೇಕು. ಮಕ್ಕಳ ದೂರು ಪೆಟ್ಟಿಗೆ ಅಳವಡಿಸಬೇಕು.

ಮಕ್ಕಳ ಸಂರಕ್ಷಣೆಗೆ ಸಂಬಂಧಪಟ್ಟಂತೆ ಗ್ರಾ. ಪಂ. ಮಟ್ಟದಲ್ಲಿ ರಚಿಸಲಾಗಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆಗಳನ್ನು ಮೂರು ತಿಂಗಳಿಗೊಮ್ಮೆ ನಡೆಸಿ, ಸಭೆಯಲ್ಲಿ ಸಲ್ಲಿಕೆಯಾಗುವ ದೂರುಗಳ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ಹೆಕ್ಕುವ ಮಕ್ಕಳ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಸಬೇಕು. ಬಂದರಿನ ಗೇಟಿನಲ್ಲಿ ಮಕ್ಕಳು ಒಳಪ್ರವೇಶಿಸದಂತೆ ತಡೆಯಲು ಬಂದರು ಇಲಾಖೆಗೆ ಖಡಕ್ ಎಚ್ಚರಿಕೆ ನೀಡಿದರು.

ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ಮತ್ತು ಆಪ್ತ ಸಮಾಲೋಚಕರನ್ನು ಗುರುತಿಸಬೇಕು. ಮಕ್ಕಳ ರಕ್ಷಣಾ ಕಾರ್ಯವನ್ನು ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವಂತೆ ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜನವರಿ ವರೆಗೆ ಮಕ್ಕಳ ಕಲ್ಯಾಣ ಸಮಿತಿಗೆ 31 ಗಂಡು ಮತ್ತು 53 ಹೆಣ್ಣು ಮಕ್ಕಳ ಪ್ರಕರಣ ಬಂದಿದ್ದು, ಬಾಕಿ ಪ್ರಕರಣ ಸೇರಿದಂತೆ ಒಟ್ಟು 31 ಗಂಡು ಹಾಗೂ 57 ಹೆಣ್ಣು ಮಕ್ಕಳ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. 5 ಮಂದಿ ಹೆಣ್ಣು ಮಕ್ಕಳ ಪ್ರಕರಣ ಬಾಕಿ ಇದೆ. ಪುನರ್ವಸತಿ ಒದಗಿಸುವ ಕುರಿತ 93 ಪ್ರಕರಣಗಳಲ್ಲಿ 23 ಮಕ್ಕಳ ಪಾಲನಾ ಸಂಸ್ಥೆಗಳಿಗೆ ವರ್ಗಾಯಿಸಿದ್ದು, 62ನ್ನು ಹೆತ್ತವರು ಅಥವಾ ಪೋಷಕರ ವಶಕ್ಕೆ ವಹಿಸಿಕೊಡಲಾಗಿದೆ. 7ನ್ನು ದತ್ತು ಕೇಂದ್ರಗಳಿಗೆ ಮತ್ತು 1ನ್ನು ಬೇರೆ ಜಿಲ್ಲೆಗೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿ. ಪಂ. ಸಿಇಓ ಡಾ. ನವೀನ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್. ಶೇಷಪ್ಪ, ಕಾರ್ಮಿಕ ಅಧಿಕಾರಿ ಕುಮಾರ್, ಕೋಟ ಠಾಣಾ ಸಹಾಯಕ ಉಪನಿರೀಕ್ಷಕಿ ಮುಕ್ತಾ, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!