ಉಡುಪಿ: ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕಾಗಿ ರಾಷ್ಟ್ರವ್ಯಾಪಿ ನಡೆಯುತ್ತಿರುವ ನಿಧಿ ಸಂಗ್ರಹ ಕಾರ್ಯಕ್ಕೆ ಉಡುಪಿಯಲ್ಲಿಯೂ ಶುಕ್ರವಾರ ಚಾಲನೆ ನೀಡಲಾಯಿತು.
ಶ್ರೀಕೃಷ್ಣಮಠದಲ್ಲಿ ಚೂರ್ಣೋತ್ಸವದ ಬಳಿಕ ಮಧ್ವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಿಧಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು.
ಉಡುಪಿಯ ಅಷ್ಟ ಮಠಾಧೀಶರಾದ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಭಾವಿ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ನಿಧಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಂಘ ಪರಿವಾರದ ಪ್ರಮುಖರಾದ ರಾಮಚಂದ್ರ ಸನಿಲ್, ಸುರೇಶ ಹೆಜಮಾಡಿ, ಗಣಪತಿ ನಾಯಕ್, ಕಿಶೋರ್ ಮೊದಲಾದವರಿದ್ದರು