Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟಿನಿಂದ ಡಿ.ವಿ. ತಡೆಯಾಜ್ಞೆ

ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟಿನಿಂದ ಡಿ.ವಿ. ತಡೆಯಾಜ್ಞೆ

ಬೆಂಗಳೂರು: ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಇಲ್ಲಿನ ಸಿಟಿ ಸಿವಿಲ್ ಕೋರ್ಟಿನಿಂದ ತನ್ನ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ಪಡೆದಿದ್ದಾರೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲವು ಪತ್ರಿಕೆ, ಚಾನಲ್ ಗಳಲ್ಲಿ ತನ್ನ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಕೆಲವು ಹಳೆಯ ದೃಷ್ಟಾಂತಗಳ ಉದಾಹರಣೆಯನ್ನೂ ನೀಡಿರುವ ಅವರು, ಹಿಂದೆ ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವೀಡಿಯೊ ಮಾಡಲಾಗಿದ್ದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇಂಥ ವೀಡಿಯೊ ಪ್ರಸಾರ ಮಾಡಿದರೆ ಘನತೆಗೆ ಧಕ್ಕೆ ಆಗಲಿದೆ. ಅದರಿಂದ ಚಾರಿತ್ರ್ಯ ವಧೆಯಾಗಲಿದೆ. ಆದ್ದರಿಂದ ತನ್ನ ಬಗ್ಗೆಯೂ ಅಂಥ ವೀಡಿಯೊ ಪ್ರಸಾರ ಮಾಡುವ ಅಪಾಯವಿದ್ದು, ಹಾಗಾದಲ್ಲಿ ಘನತೆಗೆ ಧಕ್ಕೆಯಾಗಲಿದೆ. ಚಾರಿತ್ರ್ಯ ವಧೆಯಾಗಲಿದೆ ಎಂದು ಅರ್ಜಿ ಸಲ್ಲಿಸಿದ್ದರು.

ಡಿ. ವಿ. ಅರ್ಜಿ ಮಾನ್ಯ ಮಾಡಿದ ಕೋರ್ಟ್, ಮಾನಹಾನಿಕರ ವರದಿ ಮಾಡದಂತೆ ನಿರ್ಬಂಧ ವಿಧಿಸಿದೆ.

ಈಮಧ್ಯೆ, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ, ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದೂ ಡಿ.ವಿ. ಟ್ವೀಟ್ ಮಾಡಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!