Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸೇನಾ ನೇಮಕಾತಿ ರ್ಯಾಲಿಗೆ ಚಾಲನೆ

ಸೇನಾ ನೇಮಕಾತಿ ರ್ಯಾಲಿಗೆ ಚಾಲನೆ

ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರದಿಂದ ಆರಂಭಗೊಂಡ ಸೇನಾ ನೇಮಕಾತಿ ರ್ಯಾಲಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಚಾಲನೆ ನೀಡಿದರು.

ಸೇನಾ ನೇಮಕಾತಿಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಯುವಕರಿಗೆ ಎಲ್ಲಾ ಅಗತ್ಯ ಮೂಲಭೂತ ವ್ಯವಸ್ಥೆಯನ್ನು ಜಿಲ್ಲಾಡಳಿತದ ಮೂಲಕ ಒದಗಿಸಲಾಗಿದೆ. ಸೇನೆಯ ಅಧಿಕಾರಿಗಳಿಗೆ ನೇಮಕಾತಿ ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಒದಗಿಸಲಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಅಭ್ಯರ್ಥಿಗಳಿಗೆ ಉಚಿತವಾಗಿ ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಶ್ರೀಕೃಷ್ಣ ಮಠ ಹಾಗೂ ಮೆಸ್ಕಾಂ ಗುತ್ತಿಗೆದಾರರ ಸಂಘದ ನೆರವಿನಿಂದ ಕಲ್ಪಿಸಲಾಗಿದ್ದು, ಸ್ವಯಂಸೇವಕರನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುವ ಈ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸೇರ್ಪಡೆಯಾಗಿ ದೇಶ ಸೇವೆ ಮಾಡುವಂತಾಗಲಿ ಎಂದು ಹಾರೈಸಿದರು.

ಸೇನಾ ನೇಮಕಾತಿ ವಿಭಾಗ ಮುಖ್ಯಸ್ಥ ಕರ್ನಲ್ ದುಭಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ಇದ್ದರು.

ಮೊದಲ ದಿನ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ 3 ಸಾವಿರ ಮಂದಿ ಭಾಗವಹಿಸಿದ್ದಾರೆ. 1,600 ಮೀ. ಓಟ, ಜಿಗ್ ಜಾಗ್ ನಡಿಗೆ, ಪುಲ್ ಅಪ್ಸ್, ಉದ್ದ ಜಿಗಿತ ಅರ್ಹತಾ ಪರೀಕ್ಷೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಬುಧವಾರ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಗುರುವಾರ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ರ್ಯಾಲಿಯಲ್ಲಿ ಭಾಗವಹಿಸಲು ಯುವಕರು ದೂರದ ಊರುಗಳಿಂದ ಮಧ್ಯರಾತ್ರಿಯೇ ಉಡುಪಿಗೆ ಬಂದಿಳಿದಿದ್ದರು. ಕೋವಿಡ್ ಮಾರ್ಗಸೂಚಿಯಂತೆ ಅಭ್ಯರ್ಥಿಗಳಿಗೆ ಮಾಸ್ಕ್ ಧರಿಸುವಿಕೆ ಕಡ್ಡಾಯ ಮಾಡಲಾಗಿದ್ದು, ಕೋವಿಡ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ. ಬಿಸಿಲಿನ ಝಳ ಹೆಚ್ಚಿದ್ದರೂ ಯುವಕರು ರ್ಯಾಲಿಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಮಾ. 27ರ ವರೆಗೆ ರ್ಯಾಲಿ ನಡೆಯಲಿದ್ದು, ಸುಮಾರು 37 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!