Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಪೌರ ಕಾರ್ಮಿಕರ ಸೇವೆ ಖಾಯಮಾತಿಗೆ ಸರ್ಕಾರ ಸಮ್ಮತಿ

ಪೌರ ಕಾರ್ಮಿಕರ ಸೇವೆ ಖಾಯಮಾತಿಗೆ ಸರ್ಕಾರ ಸಮ್ಮತಿ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 1

ಪೌರ ಕಾರ್ಮಿಕರ ಸೇವೆ ಖಾಯಮಾತಿಗೆ ಸರ್ಕಾರ ಸಮ್ಮತಿ
ಬೆಂಗಳೂರು: ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ.

ಅದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪೌರ ಕಾರ್ಮಿಕರ ಸಮಸ್ಯೆ ಬಗ್ಗೆ ಚರ್ಚಿಸಲು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಈ ಸಮಿತಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಪೌರ ಕಾರ್ಮಿಕರಿಗೆ ಸಾಮಾಜಿಕವಾಗಿ ಗೌರವ, ಸೌಲಭ್ಯ ಹಾಗೂ ಸುರಕ್ಷತೆ ಅಗತ್ಯ ಎನ್ನುವುದು ಸರ್ಕಾರಕ್ಕೆ ಮನವರಿಕೆಯಾಗಿದೆ. ಸರ್ಕಾರ ಪೌರ ಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸಲಿದೆ.

ಈ ಉದ್ದೇಶದಿಂದಲೇ ಆಯವ್ಯಯದಲ್ಲಿ ಪೌರ ಕಾರ್ಮಿಕರಿಗೆ ಮಾಸಿಕ 2 ಸಾವಿರ ರೂ. ಸಂಕಷ್ಟ ಭತ್ಯೆ ಘೋಷಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.

ಜೊತೆಗೆ ಪೌರ ಕಾರ್ಮಿಕರ ನೇಮಕಾತಿ ಸರಳಗೊಳಿಸಲು ವಿಶೇಷ ನೇಮಕಾತಿ ನಿಯಮ ರೂಪಿಸಲಾಗುವುದು ಹಾಗೂ ನೇಮಕಾತಿ ನೀತಿಯನ್ನೂ ಜಾರಿಗೆ ತರಲಾಗುವುದು. ಈ ಸಂದರ್ಭದಲ್ಲಿ ಐ.ಪಿ.ಡಿ. ಸಾಲಪ್ಪ ವರದಿ, ಚಂದ್ರಶೇಖರ್ ಸಮಿತಿ ವರದಿ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ವರದಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಬೇರೆ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಮಾಹಿತಿಯನ್ನೂ ಪಡೆಯಲು ಸೂಚಿಸಿದರು.

ಪೌರ ಕಾರ್ಮಿಕರಿಗೆ ಪ್ರತ್ಯೇಕವಾಗಿ ಗೃಹಭಾಗ್ಯ ಯೋಜನೆ ಜಾರಿಗೊಳಿಸಲು ಹೊಸದಾಗಿ ಮಂಜೂರಾತಿ ನೀಡಲಾಗುವುದು. ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ರೈತ ವಿದ್ಯಾ ನಿಧಿ ಮಾದರಿಯಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು. ಪೌರ ಕಾರ್ಮಿಕ ಮಹಿಳೆಯರಿಗೆ ಸರ್ಕಾರಿ ನೌಕರರಿಗೆ ನೀಡುವಂತೆ ಹೆರಿಗೆ ಸೌಲಭ್ಯ ವಿಸ್ತರಿಸಲಾಗುವುದು.

ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಸೌಲಭ್ಯ ಒದಗಿಸಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತೀ ವಾರ್ಡ್ ನಲ್ಲಿ ಒಂದು ಅಥವಾ ಎರಡು ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಎಂ.ಟಿ.ಬಿ. ನಾಗರಾಜ್, ಬಿ. ಎ. ಬಸವರಾಜ್ ಮತ್ತು ಮುನಿರತ್ನ, ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಎಂ. ಶಿವಣ್ಣ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಚ್. ಹನುಮಂತಪ್ಪ, ಅಖಿಲ ಕರ್ನಾಟಕ ಪೌರ ಕಾರ್ಮಿಕರ ಮಹಾಸಭೆ ಅಧ್ಯಕ್ಷ ನಾರಾಯಣ ಮತ್ತು ಇತರ ಸಂಘಟನೆಗಳ ಪ್ರತಿನಿಧಿಗಳು, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!