ಉಡುಪಿ: ಬಯಲುಸೀಮೆಗೆ ನೀರೂಡಿಸುವ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲು ಇನ್ನೂ ಎರಡು ವರ್ಷ ಬೇಕಾಗಬಹುದು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಹಾಗೂ ತುಮಕೂರು ನಡುವಿನ ಭೈರಗೊಂಡ್ಲಹಳ್ಳಿ ಬಳಿ ಅಣೆಕಟ್ಟು ನಿರ್ಮಾಣಕ್ಕೆ 5,500 ಎಕರೆ ಭೂಮಿಯ ಅಗತ್ಯವಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ತೊಡಕಾಗಿದೆ ಎಂದರು.
ತುಮಕೂರು ಜಿಲ್ಲೆಯಲ್ಲಿ ಭೂಮಿ ಮಾರುಕಟ್ಟೆ ಮೌಲ್ಯ ಬಹಳ ಕಡಿಮೆ ಇದ್ದರೆ, ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಇದೆ. ಆ ಕಾರಣಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ರೈತರು ಎತ್ತಿನಹೊಳೆ ಯೋಜನೆಗೆ ಭೂಮಿ ಬಿಟ್ಟುಕೊಡಲು ಒಪ್ಪುತ್ತಿಲ್ಲ.
ರೈತರಿಗೆ ಭೂ ಪರಿಹಾರ ನೀಡಲು ಸಮಸ್ಯೆ ಇಲ್ಲ. ಭೂಮಿ ಮಾರುಕಟ್ಟೆ ಮೌಲ್ಯದ 4 ಪಟ್ಟು ಮಾತ್ರ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿದ್ದು, ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ. ಹಾಗಾಗಿ ಭೂ ಪರಿಹಾರ ನೀಡಲು ಪರ್ಯಾಯ ಯೋಜನೆ ರೂಪಿಸಲಾಗುತ್ತಿದೆ. ಎತ್ತಿನಹೊಳೆ ಯೋಜನೆ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಮುಂದಿನ 2 ವರ್ಷದಲ್ಲಿ ನೀರು ಹರಿಯಲಿದೆ ಎಂದು ಸಚಿವ ಮಾಧುಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು