Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ

ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ

ಸುದ್ದಿಕಿರಣ ವರದಿ
ಸೋಮವಾರ, ಜುಲೈ 25

ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ
ಉಡುಪಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶದ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಈ ಬಾರಿ ವಿಶೇಷವಾಗಿ ಆಚರಿಸಲಾಗುವುದು. ಆಗಸ್ಟ್ 15ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕ, ಎನ್.ಸಿ.ಸಿ ಸೇರಿದಂತೆ ವಿವಿಧ ತಂಡಗಳಿಂದ ಪಥ ಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ ಎಂದರು.

ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಮುಖಂಡರಿಗೆ ಶಿಷ್ಟಾಚಾರದಂತೆ ಆಹ್ವಾನಿಸಬೇಕು ಎಂದ ಡಿಸಿ, ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.

ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.

ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನಗಳಾದ ಆ. 13ರಿಂದ 15ರ ವರೆಗೆ ಜಿಲ್ಲೆಯ ಪ್ರತೀ ಮನೆಯಲ್ಲಿಯೂ ತ್ರಿವರ್ಣ ಧ್ವಜ ರಾರಾಜಿಸಬೇಕು ಎಂದು ಮನವಿ ಮಾಡಿದ ಡಿಸಿ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಬಿ. ಎನ್. ಹಾಗೂ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!