Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಕೇಂದ್ರ ಶಿಫಾರಸಿಗೆ ಕರಾವಳಿ ಶಾಸಕರ ಏಕಧ್ವನಿಯ ಆಗ್ರಹ

ಕೇಂದ್ರ ಶಿಫಾರಸಿಗೆ ಕರಾವಳಿ ಶಾಸಕರ ಏಕಧ್ವನಿಯ ಆಗ್ರಹ

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯ್ಯರ ಹೆಸರು ನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಉಡುಪಿ ಮತ್ತು ದ.ಕ. ಜಿಲ್ಲೆಯ ಎಲ್ಲ ಶಾಸಕರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಏಕಧ್ವನಿಯಲ್ಲಿ ಆಗ್ರಹಿಸಿತು.

ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಈ ಕುರಿತ ಮನವಿ ನೀಡಲಾಯಿತು.

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಈಗಾಗಲೇ ಸಚಿವ ವಿಧಾನ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಇಲಾಖೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸರಕಾರದ ಮುಖ್ಯ ಸಚೇತಕ ಕಾರ್ಕಳ ಶಾಸಕ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಬಂಟ್ವಾಳ ಶಾಸಕ ರಾಜೇಶ ನಾಯ್ಕ್, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ ಪೂಂಜ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!