Saturday, July 2, 2022
Home ಸಮಾಚಾರ ಮತದಾರರ ಪಟ್ಟಿ ಪಾರದರ್ಶಕವಾಗಿರಲಿ

ಮತದಾರರ ಪಟ್ಟಿ ಪಾರದರ್ಶಕವಾಗಿರಲಿ

ಮತದಾರರ ಪಟ್ಟಿ ಪಾರದರ್ಶಕವಾಗಿರಲಿ
ಉಡುಪಿ: ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪದೋಷ ಕಂಡುಬಾರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ಮತದಾರರ ಅಂತಿಮ ಪಟ್ಟಿಯನ್ನು ಅತ್ಯಂತ ಪಾರದರ್ಶಕವಾಗಿ ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಡಾ. ಎಂ. ಟಿ. ರೇಜು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳು ಮತ್ತು ಸಹಾಯಕ ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಷ್ಕರಣೆ ಸಂದರ್ಭದಲ್ಲಿ ಈಗಾಗಲೇ ಮರಣ ಹೊಂದಿರುವವರು, ಎರಡು ಕ್ಷೇತ್ರಗಳಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಕೈಬಿಡಿ. ಹೆಸರು ತಿದ್ದುಪಡಿ, ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ವರ್ಗಾವಣೆ ಪ್ರಕರಣಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಅನುಮೋದನೆ ನೀಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚಿಸಿದರು.

ರಾಜಕೀಯ ಪಕ್ಷಗಳೂ ಮತದಾರರ ಪಟ್ಟಿಯಲ್ಲಿ ತಮ್ಮ ಗಮನಕ್ಕೆ ಬಂದ ಆಕ್ಷೇಪಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಅದರಿಂದ ಚುನಾವಣೆಯನ್ನು ಸುಗಮವಾಗಿ ನಡೆಸಲು ಸಾಧ್ಯವಾಗಲಿದೆ. ಜಿಲ್ಲಾಡಳಿತದ ಮೂಲಕ ಕರಡು ಮತದಾರರ ಪಟ್ಟಿ ಪಡೆದು ಪರಿಶೀಲಿಸಿ, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ, ತಮ್ಮ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ತಿದ್ದುಪಡಿ, ಯುವ ಮತದಾರರ ಸೇರ್ಪಡೆ ಮುಂತಾದವುಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡುವಂತೆ ಉಪಸ್ಥಿತರಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರನ್ನು ಕೂಡಲೇ ತೆಗೆಯಬೇಕು. ಕೆಲವರ ಹೆಸರು ಪುನರಾವರ್ತನೆಯಾಗಿದ್ದು ಅಂಥವುಗಳನ್ನೂ ಕೈಬಿಡಬೇಕು. ಕುಟುಂಬದ ಎಲ್ಲಾ ಸದಸ್ಯರ ಹೆಸರು ಒಂದೇ ಕಡೆ ಬರುವಂತೆ ಪಟ್ಟಿ ಸಿದ್ಧಪಡಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮನವಿ ಮಾಡಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳ ವಿಳಂಬಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಪರಿಶೀಲಿಸಿ ಅನುಮೋದನೆ ನೀಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚಿಸಿದ ಡಾ. ರೇಜು, ಜಿಲ್ಲೆಯಲ್ಲಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ರಾಜು ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಇದ್ದರು.

10 ಲಕ್ಷ ಮತದಾರರು
ಜಿಲ್ಲೆಯಲ್ಲಿ ಪ್ರಸ್ತುತ ನ. 18ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ 4,85,747 ಪುರುಷರು, 5,22,464 ಮಹಿಳೆಯರು ಮತ್ತು 9 ಮಂದಿ ಇತರರು ಸೇರಿದಂತೆ ಒಟ್ಟು 10 ಲಕ್ಷ 8 ಸಾವಿರ 220 ಮತದಾರರಿದ್ದು, ಮಿಂಚಿನ ನೋಂದಣಿ ಕಾರ್ಯಕ್ರಮದಲ್ಲಿ ಇದುವರೆಗೆ 3,164 ಅರ್ಜಿ ಸ್ವೀಕರಿಸಲಾಗಿದೆ. ಡಿ. 17ರ ವರೆಗೆ ನಡೆಯುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!