Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊಲ್ಲೂರಿನಲ್ಲಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ

ಕೊಲ್ಲೂರಿನಲ್ಲಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ

ಸುದ್ದಿಕಿರಣ ವರದಿ
ಮಂಗಳವಾರ, ಮೇ 17

ಕೊಲ್ಲೂರಿನಲ್ಲಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ
ಕುಂದಾಪುರ: ಕೊಲ್ಲೂರಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಲೋಕೋಪಯೋಗಿ ಇಲಾಖೆ ವತಿಯಿಂದ 1.50 ಕೋ. ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಪ್ರವಾಸಿ ಮಂದಿರವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕೊಲ್ಲೂರಿನಲ್ಲಿ ಸೋಮವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಅವರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ, ದೂರದೃಷ್ಟಿಯಲ್ಲಿಟ್ಟುಕೊಂಡು ಯಾವುದೇ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದಲ್ಲಿ ಸಾರ್ವಜನಿಕರಿಗೆ ಅದರಿಂದ ಹೆಚ್ಚಿನ ಅನುಕೂಲವಾಗಲಿದೆ. ಗ್ರಾಮೀಣ ರಸ್ತೆ ನಿರ್ಮಾಣ, ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ, ಕಿಂಡಿ ಅಣೆಕಟ್ಟು ನಿರ್ಮಾಣಗಳಂಥ ಯೋಜನೆಗಳಿಂದ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಮೀನುಗಾರಿಕೆಯನ್ನು ಹೆಚ್ಚು ಲಾಭದಾಯಕವನ್ನಾಗಿ ಮಾಡಲು ಮೀನುಗಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ನಿರ್ಮಾಣಕ್ಕೆ ಹೆಚ್ಚಿನ ಒತ್ತುನೀಡಲಾಗುತ್ತಿದ್ದು, ಮೀನಿನ ಗುಣಮಟ್ಟ ಕಾಪಾಡಲು ಅಗತ್ಯವಿರುವ ಶೀತಲೀಕರಣ ವ್ಯವಸ್ಥೆ ನಿರ್ಮಾಣ ಹಾಗೂ ಶೀತಲೀಕೃತ ವಾಹನ ಒದಗಿಸುವುದೂ ಸೇರಿದಂತೆ ವಿವಿಧ ಪರಿಕರಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕೊಲ್ಲೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಪ್ರತಿ ವರ್ಷ ಅಧಿಕವಾಗುತ್ತಿದ್ದು, ಭಕ್ತಾಧಿಗಳಿಗೆ ಹೆಚ್ಚಿನ ಸಂಖ್ಯೆಯ ವಸತಿ ಸೌಲಭ್ಯದ ಅಗತ್ಯವಿದ್ದು, ಪ್ರಸ್ತುತ ನಿರ್ಮಿಸಿರುವ ಹೊಸ ಪ್ರವಾಸಿ ಮಂದಿರದ ಜೊತೆಗೆ, ಈಗಾಗಲೇ ಇರುವ ಹಳೆಯ ಪ್ರವಾಸಿ ಮಂದಿರ ತೆರವುಗೊಳಿಸಿ ಆ ಪ್ರದೇಶದಲ್ಲಿ ಸುಸಜ್ಜಿತ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಾಡಲು ಈಗಾಗಲೇ 9.80 ಕೋಟಿ ರೂ ಮಂಜೂರಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಅರಂಭಗೊಳ್ಳಲಿದೆ.

ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಗುಣಮಟ್ಟದ ಕಾಮಗಾರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ಕಳೆಪ ಕಾಮಗಾರಿ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಮ ಕೃಷ್ಣ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ರವಿಕುಮಾರ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!