Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಪತ್ರಿಕಾ ಭವನ ಮುಂಭಾಗ ಉದ್ಯಾನವನ ನಿರ್ಮಾಣ

ಪತ್ರಿಕಾ ಭವನ ಮುಂಭಾಗ ಉದ್ಯಾನವನ ನಿರ್ಮಾಣ

ಮಂಗಳೂರು: ಇಲ್ಲಿನ ಪತ್ರಿಕಾ ಭವನದ ಮುಂಭಾಗದಲ್ಲಿ ಮಂಗಳೂರು ಮಹಾನಗರಪಾಲಿಕೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಉದ್ಯಾನವನ ನಿರ್ಮಿಸುವುದಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆ ಸಹಯೋಗದೊಂದಿಗೆ ಸೋಮವಾರ ನಗರದ ಪತ್ರಿಕಾ ಭವನದ ಬಳಿ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಪರಿಸರ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿವರ್ಷ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದ್ದು, ಇದು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ ಮಾತನಾಡಿ, ಮಂಗಳೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಳೆದ 5 ವರ್ಷದಲ್ಲಿ 50 ಸಾವಿರ ಗಿಡಗಳನ್ನು ನೆಡಲಾಗಿದೆ. ಪ್ರಸ್ತುತ ವರ್ಷದಲ್ಲಿ 2 ಸಾವಿರ ಗಿಡ ನೆಡಲಾಗಿದೆ. ಆದರೆ, ಈ ಬಾರಿ ಕೊರೊನಾ ಕಾರಣದಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಗಿಡ ನೆಡಲು ಸಾಧ್ಯವಾಗಿಲ್ಲ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಆರಿಫ್ ಪಡುಬಿದ್ರಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟಾ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!