Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ

ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ

ಕಾರ್ಕಳ: ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ವಾತ್ಸಲ್ಯ ಕಾರ್ಯಕ್ರಮದಡಿ ಆ. 15ರೊಳಗೆ ಜಿಲ್ಲೆಯ 2.40 ಲಕ್ಷ ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ವಾತ್ಸಲ್ಯ ಮಕ್ಕಳ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ 3ನೇ ಅಲೆ ಮಕ್ಕಳಿಗೆ ಹೆಚ್ಚಾಗಿ ಹರಡುವ ಸಾಧ್ಯತೆಗಳಿದ್ದು, ಅದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಶಿಬಿರದಲ್ಲಿ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಗುರುತಿಸಿ, ಪೌಷ್ಠಿಕ ಆಹಾರ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚುಮಾಡುವ ಔಷಧಿಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಮಕ್ಕಳಿಗೆ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಯ ಅಲ್ಪಾವಧಿಯಲ್ಲಿ 24,000 ಆಕ್ಸಿಜನ್ ಬೆಡ್, ಸುಮಾರು 5 ಸಾವಿರಕ್ಕಿಂತ ಹೆಚ್ಚು ಐ.ಸಿ.ಯು ಬೆಡ್ ಹಾಗೂ 2 ಸಾವಿರಕ್ಕಿಂತ ಹೆಚ್ಚು ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿ ಸಂಪೂರ್ಣ ಬೆಂಬಲದಿಂದ ಕೋವಿಡ್ ಲಸಿಕೆ ಸಕಾಲಕ್ಕೆ ದೊರೆತಿದೆ. ಅದೇ ರೀತಿ ಇಡೀ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದರು.

ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ವಾತ್ಯಲ್ಯ ಕಾರ್ಯಕ್ರಮದಲ್ಲಿ ತಾಲೂಕಿನ 40 ಸಾವಿರ ಮಕ್ಕಳನ್ನು ಆರೋಗ್ಯ ತಪಾಸಣೆಗೊಳಪಡಿಸಲಾಗುವುದು. ತಾಲೂಕಿನ 230 ಅಂಗನವಾಡಿಗಳು, 246 ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳು ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಪುರಸಭೆ ಅಧ್ಯಕ್ಷೆ ಸುಮಾ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎಸ್.ಪಿ. ವಿಷ್ಣುವರ್ಧನ್, ನಕಲ್ಸ್ ನಿಗ್ರಹ ಪಡೆ ಎಸ್.ಪಿ. ನಿಖಿಲ್, ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ., ಡಿಎಚ್.ಓ ಡಾ. ನಾಗಭೂಷಣ ಉಡುಪ ಮೊದಲಾದವರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!