Wednesday, August 10, 2022
Home ಸಮಾಚಾರ ರಾಜ್ಯ ವಾರ್ತೆ 2025ರೊಳಗೆ 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ

2025ರೊಳಗೆ 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ

2025ರೊಳಗೆ 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ
(ಸುದ್ದಿಕಿರಣ ವರದಿ)

ಉಡುಪಿ: ಗೃಹ ಇಲಾಖೆ ವತಿಯಿಂದ 2025ರೊಳಗೆ 10 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲುದ್ದೇಶಿಸಲಾಗಿದೆ. ಸುಮಾರು 200 ಕೋ. ರೂ. ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ ಹಾಗೂ 140 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇಲ್ಲಿನ ಮಿಷನ್ ಕಂಪೌಂಡ್ ಬಳಿ 10 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನೊಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಇಲಾಖೆ ಬಲವರ್ಧನೆಗೆ ಕ್ರಮ
ಪೊಲೀಸ್ ಇಲಾಖೆಯ ಬಲವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಕ್ರೈಂ ಸೀನ್ ಅಧಿಕಾರಿಗಳ ನೇಮಕಾತಿ ನಡೆಯುತ್ತಿದೆ. ಇಲಾಖೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಸೈಬರ್ ಅಪರಾಧ ಪತ್ತೆ ಮಾಡಲು ಬ್ಯಾಂಕ್ ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಹಣ ಕಳೆದುಕೊಂಡ ವ್ಯಕ್ತಿ 1ರಿಂದ 2 ಗಂಟೆಯೊಳಗೆ ದೂರು ನೀಡಬೇಕು. ತಕ್ಷಣದಲ್ಲಿ ಲಿಖಿತ ದೂರು ನೀಡಲು ಸಾಧ್ಯವಾಗದಿದ್ದಲ್ಲಿ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ಸಾರ್ವಜನಿಕರು ಪೊಲೀಸ್ ಇಲಾಖೆಯ ನೆರವು ಅಗತ್ಯವಿದ್ದಲ್ಲಿ 112ಗೆ ಕರೆ ಮಾಡುವಂತೆ ಸಚಿವ ಆರಗ ಹೇಳಿದರು.

ಬಹು ಮಹಡಿ ಕಟ್ಟಡಗಳನ್ನು ನಿರ್ಮಿಸುವಾಗ ಅಗ್ನಿಶಾಮಕ ಇಲಾಖೆಯ ನಿರಾಕ್ಷೇಪಣಾ ಅನುಮತಿ ಪತ್ರ ಮತ್ತು ಕಟ್ಟಡ ಮುಕ್ತಾಯಗೊಂಡಾಗ ಕ್ಲಿಯರೆನ್ಸ್ ಪತ್ರ ಪಡೆಯುವುದು ಕಡ್ಡಾಯ.

ಮಾದಕ ವಸ್ತುಗಳ ನಿಯಂತ್ರಣ, ಇಲಾಖೆಗೆ ದೊಡ್ಡ ಸವಾಲಾಗಿದೆ. ಸಾರ್ವಜನಿಕರು ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಬೇಕು. ರಾಜ್ಯದಲ್ಲಿ ಎಫ್.ಎಸ್.ಎಲ್ ಲ್ಯಾಬ್ ನ್ನು ಅತ್ಯಾಧುನಿಕವಾಗಿ ಸಿದ್ಧಪಡಿಸಿದ್ದು, ಸೈಬರ್ ಕ್ರೈಂ ತನಿಖೆ ಕುರಿತಂತೆ ಗುಜರಾತ್ ಸರಕಾರದೊಂದಿಗೆ ಎಂಓಯು ಮಾಡಿಕೊಳ್ಳಲಾಗಿದ್ದು, ರಾಜ್ಯದ ಸಿಬ್ಬಂದಿಗಳನ್ನು ಅಲ್ಲಿಗೆ ತರಬೇತಿಗಾಗಿ ಕಳಿಸಲಾಗುವುದು ಎಂದರು.

ಮಧ್ಯವರ್ತಿಗಳನ್ನು ನಂಬಬೇಡಿ
ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದ್ದು, ಮಧ್ಯವರ್ತಿಗಳನ್ನು ನಂಬಿ ಯಾರೂ ಮೋಸ ಹೋಗಬೇಡಿ. ಅಂಥ ನಕಲಿ ಮಧ್ಯವತಿಗಳ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸಚಿವ ಆರಗ ತಿಳಿಸಿದರು.

ಮಣಿಪಾಲದಲ್ಲಿ ನೂತನ ಅಗ್ನಿಶಾಮಕ ಠಾಣೆಗೆ ಮಂಜೂರಾತಿ ನೀಡಲಾಗುವುದು ಎಂದೂ ಹೇಳಿದರು.

ಔಟ್ ಪೋಸ್ಟ್ ಕೊಡಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಉಡುಪಿ ನಗರದಲ್ಲಿ ಪೊಲೀಸರಿಗೆ ಮನೆಗಳ ಕೊರತೆ ಇದೆ. ದೊಡ್ಡಣಗುಡ್ಡೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ವಸತಿಗೃಹಗಳನ್ನು ನೆಲಸಮ ಮಾಡಿ, ಸಮುಚ್ಛಯ ಮಾದರಿಯಲ್ಲಿ ನೂತನ ಗೃಹಗಳ ನಿರ್ಮಾಣ, ಶ್ರೀಕೃಷ್ಣ ಮಠದಲ್ಲಿ ಪೊಲೀಸ್ ಔಟ್ ಪೋಸ್ಟ್ ನಿರ್ಮಾಣ ಮತ್ತು ಮಣಿಪಾಲದಲ್ಲಿ ಅಗ್ನಿಶಾಮಕ ಠಾಣೆಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿದರು.

ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್, ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಎ.ಎನ್.ಎಫ್ ಹಾಗೂ ಕರಾವಳಿ ಕಾವಲು ಪಡೆ ಎಸ್ಪಿ ನಿಖಿಲ್ ಇದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ವಂದಿಸಿದರು. ಮನಮೋಹನ್ ರಾವ್ ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!