Saturday, August 13, 2022
Home Uncategorized ಶೇ. 100 ಗುರಿ ಸಾಧಿಸಲು ಕಟ್ಟುನಿಟ್ಟಿನ ಸೂಚನೆ

ಶೇ. 100 ಗುರಿ ಸಾಧಿಸಲು ಕಟ್ಟುನಿಟ್ಟಿನ ಸೂಚನೆ

ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 26

ಶೇ. 100 ಗುರಿ ಸಾಧಿಸಲು ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ನಡೆಸಿದರು.

ವಿಕಾಸಸೌಧದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಹಿಂದುಳಿದ ವರ್ಗಗಳ ಸಮುದಾಯಗಳ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕ ನಿಗಮಗಳನ್ನು ತೆರೆದು ವಿವಿಧ ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಕಾಲಮಿತಿಯಲ್ಲಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕ್ರಿಯಾಯೋಜನೆಯಲ್ಲಿ ಅನುಮೋದನೆಗೊಂಡ ಯೋಜನೆಗಳ ಅನುಷ್ಠಾನದಲ್ಲಿ ಶೇ. 100 ಗುರಿ ಸಾಧಿಸಬೇಕು ಎಂದು ಸಚಿವರು ಸೂಚಿಸಿದರು.

2021- 22 ಹಾಗೂ 2022- 23ನೇ ಸಾಲಿನಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ಇಲಾಖೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ನಿಗಮಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 11 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಯಲಾಗುತ್ತಿದ್ದು, ಪ್ರತೀ ಜಿಲ್ಲೆಗೆ 60ಕ್ಕಿಂತ ಹೆಚ್ಚು ಗುರಿ ಹಾಗೂ ಪ್ರತೀ ಶಾಸಕರ ವಿವೇಚನೆಯಡಿ ಸುಮಾರು 41 ಕೊಳವೆ ಬಾವಿಗಳ ಗುರಿ ನೀಡಲಾಗುತ್ತಿದೆ ಎಂದವರು ತಿಳಿಸಿದರು.

ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಯೋಜನೆ ಜಾರಿಗೆ ತಂದಿರುವುದರಿಂದ ಪ್ರತೀ ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಎಲ್ಲ ನಿಗಮಗಳು ಸುವಿಧಾ ತಂತ್ರಾಂಶದಲ್ಲಿಯೇ ಅರ್ಜಿ ಆಹ್ವಾನಿಸಿ ಫಲಾನುಭವಿಗಳನ್ನು ಅಯ್ಕೆ ಮಾಡಿ ಯೋಜನೆ ಅನುಷ್ಠಾನಗೊಳಿಸಬೇಕೆಂದು ಸಚಿವ ಕೋಟ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಆಯುಕ್ತ ಕೆ. ಎ. ದಯಾನಂದ ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!