Monday, July 4, 2022
Home ಲೋಕಾಭಿರಾಮ ಆರಂಬ ಎಂಓ4 ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಎಂಓ4 ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಉಡುಪಿ: ಜಿಲ್ಲೆಯಲ್ಲಿ ಭತ್ತದ ಬಿತ್ತನೆಗೆ ಪ್ರತೀ ವರ್ಷ ಎಂಓ4 ಬಿತ್ತನೆ ಬೀಜದ ಕೊರತೆಯಾಗುತ್ತಿದ್ದು, ಮುಂದಿನ ವರ್ಷದಿಂದ ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಭರವಸೆ ನೀಡಿದರು.

ಶನಿವಾರ ಜಿ. ಪಂ. ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೃಷಿ ಇಲಾಖೆ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿಯಲ್ಲಿ ಹಡಿಲು ಕೃಷಿ ಭೂಮಿಯಲ್ಲಿ ಬಿತ್ತನೆ ಕಾರ್ಯ ನಡೆಯುತ್ತಿದ್ದು, ಇದು ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ. ಜಿಲ್ಲೆಯ ಪ್ರತಿಯೊಬ್ಬ ರೈತರೂ ತಮ್ಮ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವಂತೆ ಕೃಷಿ ಇಲಾಖೆ ಮೂಲಕ ಮನವೊಲಿಸಿ, ಪ್ರೋತ್ಸಾಹಿಸಲಾಗುವುದು. ಜಿಲ್ಲೆಯಲ್ಲಿ ಕೊರೊನಾ ನಂತರ ಕೃಷಿ ಚಟುವಟಿಕೆ ನಡೆಸುವವರ ಸಂಖ್ಯೆ ಹೆಚ್ಚಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆ ಬೀಜ ದೊರೆಯದೇ ಇರುವುದರಿಂದ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆಯುತ್ತಿಲ್ಲ. ಆದ್ದರಿಂದ ಜಿಲ್ಲೆಗೆ ಅಗತ್ಯವಿರುವ ಎಂಓ4 ಬಿತ್ತನೆ ಬೀಜವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಿಂಗಾರು ಹಂಗಾಮಿನಲ್ಲಿ ಸಾಧ್ಯವಾದಲ್ಲಿ ಇಲ್ಲಿಯೇ ಬಿತ್ತನೆ ಬೀಜ ಉತ್ಪಾದಿಸುವಂತೆ ತಿಳಿಸಿದರು.

ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯಡಿ ರೈತರು ಕೃಷಿಗೆ ಸಂಬಂಧಿಸಿದ ಹಲವು ಚಟುವಟಿಕೆ ಕೈಗೊಳ್ಳಲು ಅವಕಾಶವಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ ಸಚಿವ ಬಿ. ಸಿ. ಪಾಟೀಲ್, ಜಿಲ್ಲೆಯಲ್ಲಿ ಹವಾಮಾನ ಬೆಳೆ ಆಧರಿತ ವಿಮೆ ಯೋಜನೆಯಲ್ಲಿ ಬಾಕಿ ಇರುವ ರೈತರ ವಿಮಾ ಮೊತ್ತ ಶೀಘ್ರ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರ ಸಮಸ್ಯೆ ಇರುವುದರಿಂದ ಯಾಂತ್ರೀಕೃತ ಕೃಷಿಗೆ ಆದ್ಯತೆ ನೀಡಿ ಸಕಾಲದಲ್ಲಿ, ಕಡಿಮೆ ವೆಚ್ಚದಲ್ಲಿ ಯಂತ್ರೋಪಕರಣ ಸೇವೆ ರೈತರಿಗೆ ದೊರಕಿಸುವಲ್ಲಿ ಸೇವಾಕೇಂದ್ರಗಳು ಕಾರ್ಯನಿರ್ವಹಿಸಬೆಕು ಎಂದು ಸಚಿವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಕಾಡುಪ್ರಾಣಿಗಳ ಹಾವಳಿ ತಪ್ಪಿಸುವಂತೆ, ಹಣ್ಣು ಮತ್ತು ತರಕಾರಿ ಬೆಳೆಗಳ ಶೇಖರಣೆಗಾಗಿ ಕೋಲ್ಡ್ ಸ್ಟೋರೇಜ್ ನಿರ್ಮಾಣ, ಭತ್ತ ಬೆಳೆಗೆ ಪ್ರೋತ್ಸಾಹಧನ ಮತ್ತು ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಸಚಿವರಿಗೆ ಮನವಿ ಸಲ್ಲಿಸಿದರು.

ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿರುವ ರೈತರೊಂದಿಗೆ ಒಂದು ದಿನ ಬೆರೆತು ಅವರ ಸಮಸ್ಯೆ ಆಲಿಸುವ ಕಾರ್ಯಕ್ರಮ ಶೀಘ್ರದಲ್ಲಿ ಪುನರಾರಂಭಿಸುವ ಮೂಲಕ ರೈತರ ಸಮಸ್ಯೆ ಅರಿತು, ಸ್ಥಳದಲ್ಲಿಯೇ ಅವುಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಪಾಟೀಲ್ ಹೇಳಿದರು.

ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಮತ್ತು ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಹಾಗೂ ಜಿಲ್ಲೆಯ ವಿವಿಧ ಕೃಷಿಕ ಸಂಘಟನೆಗಳ ಪ್ರತಿನಿಧಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!