Sunday, July 3, 2022
Home ಲೋಕಾಭಿರಾಮ ಆರೋಗ್ಯ ಡೆಂಗ್ಯೂ ನಿಯಂತ್ರಣ: ಅಗತ್ಯ ಕ್ರಮಕ್ಕೆ ಸೂಚನೆ

ಡೆಂಗ್ಯೂ ನಿಯಂತ್ರಣ: ಅಗತ್ಯ ಕ್ರಮಕ್ಕೆ ಸೂಚನೆ

ಸುದ್ದಿಕಿರಣ ವರದಿ
ಮಂಗಳವಾರ, ಮೇ 17

ಡೆಂಗ್ಯೂ ನಿಯಂತ್ರಣ: ಅಗತ್ಯ ಕ್ರಮಕ್ಕೆ ಸೂಚನೆ
ಕುಂದಾಪುರ: ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಂಡು, ಡೆಂಗ್ಯೂ ಪ್ರಕರಣಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು.

ಸೋಮವಾರ ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ ನ ಡೆಂಗ್ಯೂ ಪೀಡಿತ ಮನೆಗಳಿಗೆ ಭೇಟಿ ನೀಡಿ ಮಾತನಾಡಿದರು.

ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಈ ಗ್ರಾಮಗಳ ವ್ಯಾಪ್ತಿಯ ಪ್ರತೀ ಮನೆಗಳಿಗೆ ಭೇಟಿ ನೀಡಿ, ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮತ್ತು ನೀರು ಶೇಖರಣೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಆಯೋಜಿಸಬೇಕು. ಸೊಳ್ಳೆ ಕಡಿತದಿಂದ ಪಾರಾಗಲು ಅಗತ್ಯವಿರುವ ಸೊಳ್ಳೆ ಪರದೆ ಮತ್ತು ಡಿಎಂಪಿ ತೈಲ ನೀಡುವಂತೆ ಹಾಗೂ ನಿರಂತರವಾಗಿ ಫಾಗಿಂಗ್ ಮಾಡುವಂತೆ ಸೂಚಿಸಿದರು.

ಈ ಭಾಗದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯವಿರುವ ಇನ್ನೂ ಹೆಚ್ಚಿನ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಅಂಗಾರ ಹೇಳಿದರು.

ಕೊಲ್ಲ್ಲೂರು, ಮುದೂರು ಮತ್ತು ಜಡ್ಕಲ್ ನಲ್ಲಿ ಜನವರಿಯಿಂದ ನಿರಂತರವಾಗಿ ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ಇದುವರೆಗೆ 113 ಪ್ರಕರಣ ವರದಿಯಾಗಿದ್ದು, ಪ್ರಸ್ತುತ 47 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 18 ವರ್ಷದೊಳಗಿನ 6 ಮಂದಿ ಮಕ್ಕಳು ಇದ್ದಾರೆ. ಡೆಂಗ್ಯೂ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ತಲಾ 25 ಮಂದಿ ಪುರುಷ ಮತ್ತು ಮಹಿಳೆಯರು ಮತ್ತು 10 ಮಕ್ಕಳಿಗೆ ಸೇರಿದಂತೆ ಒಟ್ಟು 60 ಬೆಡ್ ಗಳ ವಿಶೇಷ ವಾರ್ಡ್ ತೆರೆಯಲಾಗಿದೆ ಎಂದರು.

ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಡ್ಕಲ್ ಗ್ರಾ. ಪಂ. ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷ ಲಕ್ಷ್ಮಣ ಶೆಟ್ಟಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ (ಪ್ರಭಾರ) ಡಾ. ಚಿದಾನಂದ ಸಂಜು, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!