Monday, July 4, 2022
Home ಲೋಕಾಭಿರಾಮ ಟ್ಯಾಬ್ಲೆಟ್ ಪಿಸಿಗಳಿಂದ ಆನ್ ಲೈನ್ ಶಿಕ್ಷಣಕ್ಕೆ ಅನುಕೂಲ

ಟ್ಯಾಬ್ಲೆಟ್ ಪಿಸಿಗಳಿಂದ ಆನ್ ಲೈನ್ ಶಿಕ್ಷಣಕ್ಕೆ ಅನುಕೂಲ

ಉಡುಪಿ: ಕೋವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಉದ್ದೇಶದಿಂದ ಸರಕಾರ ಎಲ್ಲಾ ಸರಕಾರಿ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಅನುಕೂಲವಾಗಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಬುಧವಾರ ಅಜ್ಜರಕಾಡು ಡಾ| ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಮತ್ತು ಡಾ| ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆದ ಸ್ಮಾರ್ಟ್ ಕ್ಲಾಸ್ ರೂಮ್ ಉದ್ಘಾಟನೆ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ.ಸಿ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಆಸಕ್ತಿಯಿಂದ ತೊಡಗಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ. ಆದರೆ, ಇಂದಿನ ಯುವಜನತೆ ಸ್ಮಾರ್ಟ್ ಫೋನ್ ಗಳನ್ನು ಸದುದ್ದೇಶಕ್ಕೆ ಬಳಸಿಕೊಳ್ಳುವುದಕ್ಕಿಂತ ಹೆಚ್ಚಾಗಿ ದುರುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನೇ ಹಾಳುಮಾಡಿಕೊಳ್ಳುವ ಭೀತಿ ಇದೆ. ಸರಕಾರದಿಂದ ಉಚಿತವಾಗಿ ದೊರೆತ ಟ್ಯಾಬ್ಲೆಟ್ ಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿ ಇತರರಿಗೆ ಮಾದರಿಯಾಗುವಂತೆ ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅನುಕೂಲವಾಗುವಂತೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಲಸಿಕೆ ಪಡೆದ ಬಳಿಕವೇ ಶಾಲಾ ಕಾಲೇಜು ಪುನರಾರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದರು.

ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಹೆಗ್ಡೆ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ಸೌಲಭ್ಯ ದೊರಕುವಂತೆ ಮಾಡುವುದು ಸರಕಾರದ ಉದ್ದೇಶವಾಗಿದ್ದು, ಈ ಟ್ಯಾಬ್ಲೆಟ್ ಗಳಿಗೆ ಸಿಮ್ ಅಳವಡಿಸುವ ಮೂಲಕ ಇಂಟರ್ನೆಟ್ ಸಂಪರ್ಕ ಕಲ್ಪಿಸಿ, ಆನ್ ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

ದ.ಕ. ಮತ್ತು ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಇದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಕಾಲೇಜು ಪ್ರಾಂಶುಪಾಲ ಡಾ| ಭಾಸ್ಕರ್ ಶೆಟ್ಟಿ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!