Saturday, July 2, 2022
Home ಲೋಕಾಭಿರಾಮ ವಸತಿ ಶಾಲೆಗಳಿಗೆ ಸ್ಥಳೀಯ ವಿದ್ಯಾರ್ಥಿಗಳು ಬರುವಂತಾಗಬೇಕು

ವಸತಿ ಶಾಲೆಗಳಿಗೆ ಸ್ಥಳೀಯ ವಿದ್ಯಾರ್ಥಿಗಳು ಬರುವಂತಾಗಬೇಕು

ಉಡುಪಿ: ಜಿಲ್ಲೆಯಲ್ಲಿರುವ ವಸತಿ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇತರ ಜಿಲ್ಲೆಗಳ ವಿದ್ಯಾರ್ಥಿಗಳೇ ಇದ್ದು, ಸ್ಥಳೀಯ ವಿದ್ಯಾರ್ಥಿಗಳ ದಾಖಲಾತಿ ಆಗುವಂತೆ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ವಸತಿ ಶಾಲೆಗಳ ನಿರ್ವಹಣೆಗೆ ಸಂಬಂಧಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರು, ನಿಲಯ ಪಾಲಕರು, ಕಂಪ್ಯೂಟರ್ ಶಿಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮ ಮೊರಾಜರ್ಿ ದೇಸಾಯಿ, ಡಾ. ಬಿ. ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ. 10 ಕೊನೆಯ ದಿನ. ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳ ಪ್ರಯೋಜನ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ವಸತಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಸರ್ಕಾರ ಉಚಿತ ಊಟ, ವಸತಿ, ಸಮವಸ್ತ್ರ, ಶೂ, ಪಠ್ಯಪುಸ್ತಕ, ನೋಟ್ ಪುಸ್ತಕ ನೀಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುವ ಮೂಲಕ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಅದಕ್ಕಾಗಿ ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದರು.

6ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾರ್ಗದರ್ಶನ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ಸಲಹೆ ನೀಡಿದರು.

ಕಾರ್ಕಳ ತಾಲೂಕಿನ ಮಿಯಾರು, ಕಾಪು ತಾಲೂಕಿನ ಕಳತ್ತೂರು, ಉಡುಪಿ ತಾಲೂಕಿನ ಹಿರೇಬೆಟ್ಟು, ಬ್ರಹ್ಮಾವರ ತಾಲೂಕಿನ ಆರೂರು, ಕುಂದಾಪುರ ತಾಲೂಕಿನ ಶಂಕರನಾರಾಯಣ, ಸಿದ್ದಾಪುರ ಮತ್ತು ಯಡ್ಯಾಡಿ- ಮತ್ಯಾಡಿ ಹಾಗೂ ಬೈಂದೂರು ತಾಲೂಕಿನ ಹೆರಂಜಾಲು ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಸೆ. 16ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಸಭೆಯಲ್ಲಿ ಜಿಲ್ಲಾ ಪ್ರವೇಶ ಪರೀಕ್ಷಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ಮಡ್ಲೂರ್, ಬಿ.ಸಿ.ಎಂ ಜಿಲ್ಲಾ ಮಟ್ಟದ ಅಧಿಕಾರಿ ದೇವೇಂದ್ರ ಬಿರಾದಾರ್, ಐ.ಟಿ.ಡಿ.ಪಿ. ಇಲಾಖೆ ಯೋಜನಾ ಸಮನ್ವಯಾಧಿಕಾರಿ ದೂದ್ ಪೀರ್, ಡಿ.ಡಿ.ಪಿ.ಐ. ಎನ್. ಎಚ್ ನಾಗೂರ್, ಡಯಟ್ ಪ್ರಾಂಶುಪಾಲ ವೇದಮೂರ್ತಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಚಂದ್ರಶೇಖರ ಬಿ. ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!