Thursday, July 7, 2022
Home ಲೋಕಾಭಿರಾಮ ಮಕ್ಕಳ ರಕ್ಷಣೆಗೆ ಅಗತ್ಯ ಸಿದ್ಧತೆ ಅಗತ್ಯ

ಮಕ್ಕಳ ರಕ್ಷಣೆಗೆ ಅಗತ್ಯ ಸಿದ್ಧತೆ ಅಗತ್ಯ

ಉಡುಪಿ: ಕೋವಿಡ್ 3ನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ಮಾಧ್ಯಮ ವರದಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ರಕ್ಷಿಸುವ ಕುರಿತಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೆಡಿಕಲ್ ಎಕ್ಸ್ ಪರ್ಟ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳನ್ನು ರಕ್ಷಿಸುವ ಕುರಿತಂತೆ ಈಗಾಗಲೇ ಭಾರತೀಯ ಮಕ್ಕಳ ವೈದ್ಯರ ಸಂಘ ಸಿದ್ಧಪಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿ, ಮಕ್ಕಳ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿಯಲ್ಲಿ 40 ಐಸಿಯು ಬೆಡ್ ಮತ್ತು ಜಿಲ್ಲಾಸ್ಪತ್ರೆ ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಒಟ್ಟು 60 ಬೆಡ್ ಸಿದ್ಧಪಡಿಸುವಂತೆ ತಿಳಿಸಿದರು.

ಮಕ್ಕಳಿಗೆ ಕೋವಿಡ್ ಚಿಕಿತ್ಸೆ ನೀಡುವ ಕುರಿತಂತೆ ಜಿಲ್ಲೆಯ ಸರ್ಕಾರಿ ಮಕ್ಕಳ ವೈದ್ಯರೊಂದಿಗೆ ಎಲ್ಲಾ ಖಾಸಗಿ ಆಸ್ಪತ್ರೆಗಳ ಮಕ್ಕಳ ತಜ್ಞರು ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಮಕ್ಕಳಿಗೆ ನೀಡಬೇಕಾದ ಚಿಕಿತ್ಸೆ ವಿಧಾನ ಕುರಿತು ಭಾರತೀಯ ಮಕ್ಕಳ ವೈದ್ಯರ ಸಂಘ ಸಿದ್ಧಪಡಿಸಿರುವ ವಿಧಾನಗಳ ಬಗ್ಗೆ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಶುಶ್ರೂಷಕ ಸಿಬ್ಬಂದಿಗೆ ಮಣಿಪಾಲ ಕೆ.ಎಂ.ಸಿ.ಯಲ್ಲಿ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ವೈದ್ಯಕೀಯ ಉಪಕರಣಗಳ ಬಳಕೆ ಕುರಿತಂತೆ ತಾಂತ್ರಿಕ ತರಬೇತಿಯನ್ನೂ ನೀಡುವಂತೆ ಡಿಸಿ ಜಗದೀಶ್ ತಿಳಿಸಿದರು.

ಪೋಷಕರು ಅನಗತ್ಯವಾಗಿ ತಮ್ಮ ಮಕ್ಕಳನ್ನು ಜನಸಂದಣಿ ಇರುವ ಪ್ರದೇಶಗಳಿಗೆ ಕರೆದೊಯ್ಯದೇ ಮಕ್ಕಳಿಗೆ ಮನೆಯಲ್ಲಿಯೇ ಸಿದ್ಧಪಡಿಸಿದ ಪೌಷ್ಠಿಕ ಆಹಾರ ನೀಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು ಎಂದು ಸಭೆಯಲ್ಲಿದ್ದ ಮಕ್ಕಳ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್.ಓ ಡಾ. ನಾಗಭೂಷಣ ಉಡುಪ, ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಭಟ್ ಹಾಗೂ ಜಿಲ್ಲೆಯ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!