ಬೆಂಗಳೂರು: ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪುನರುಚ್ಚರಿಸಿದ್ದಾರೆ. ಕಾನೂನು ಉಲ್ಲಂಘಿಸುವ ಶಾಲೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಒಂದು ವರ್ಗ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್, ಭಾಷೆಯಾಗಿ ಕನ್ನಡ ಕಲಿಸುವ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ಒಂದರಿಂದ ಹತ್ತನೇ ತರಗತಿ ವರಿಗೆ ಹಂತ ಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸುತ್ತಿದೆ. ಪೋಷಕರೂ ತಮ್ಮ ಜವಾಬ್ದಾರಿ ಅರಿತು ಸರ್ಕಾರದ ಕಾಯ್ದೆಯನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಣೆ ನೀಡಬೇಕು.
ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೂ ಯಾವುದೇ ಆಗ್ರಹಗಳಿಗೆ ಮಣಿಯದೇ ಮತ್ತು ಕನ್ನಡ ಕಲಿಕೆ ವಿಷಯದಲ್ಲಿ ಯಾವುದೇ ರೀತಿಯ ರಾಜಿಗೆ ಒಳಗಾಗದೇ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ ಕನ್ನಡವನ್ನು ತಮ್ಮ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಎಂದಿನಂತೆ ಮುಂದುವರಿಸಬೇಕು ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಕನ್ನಡ ಕಲಿಕಾ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಈ ಸಂಬಂಧ ತಮ್ಮನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ ಎಂದು ಸುರೇಶಕುಮಾರ್ ಹೇಳಿದರು.