Thursday, July 7, 2022
Home ಲೋಕಾಭಿರಾಮ ಕೋವಿಡ್ ನಿಯಮ ಪಾಲಿಸಲು ಸೂಚನೆ

ಕೋವಿಡ್ ನಿಯಮ ಪಾಲಿಸಲು ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಈಚೆಗೆ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದು ಕಂಡುಬರುತ್ತಿದ್ದು, ಈ ಕುರಿತಂತೆ ಜಿಲ್ಲಾ ಪರಿಣಿತ ಸಲಹಾ ಸಮಿತಿ ಅಭಿಪ್ರಾಯದಂತೆ ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳಾದ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಮತ್ತು ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವ ಕ್ರಮ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪರಿಣಿತ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಶಿಕ್ಷಣ ಸಂಸ್ಥೆಗಳು ತೆರೆದಿದ್ದು, ಅಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್ ಸುರಕ್ಷತಾ ನಿಯಮ ಪಾಲನೆ ಕಂಡುಬರುತ್ತಿಲ್ಲ. ನಿಯಮ ಉಲ್ಲಂಘಿಸುವ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ನೀಡಬೇಕು. ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ವರದಿ ಇಲ್ಲದೇ ಆಗಮಿಸುವವರ ವಿರುದ್ಧ ಎಪಿಡಮಿಕ್ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಸಭೆ, ಸಮಾರಂಭಗಳಲ್ಲಿ ವ್ಯಕ್ತಿಗತ ಅಂತರ ಪಾಲಿಸದಿರುವುದು ಮತ್ತು ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಕೈಗೊಳ್ಳಲು ಮಾರ್ಷಲ್ ಗಳನ್ನು ನೇಮಿಸಲಾಗುವುದು. ಅವರು ಸಭೆ ನಡೆಯುವ ಸ್ಥಳಗಳಿಗೇ ಆಗಮಿಸಿ ದಂಡ ಸೇರಿದಂತೆ ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವರು ಎಂದು ಡಿಸಿ ಹೇಳಿದರು.

ಜಿಲ್ಲೆಗೆ ಹೊರ ದೇಶ ಮತ್ತು ರಾಜ್ಯದಿಂದ ಆಗಮಿಸುವವರ ವಿವರಗಳನ್ನು ಸಾರ್ವಜನಿಕರು ಸಮೀಪದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಸೋಂಕಿತರ ಪ್ರಾಥಮಿಕ ವಿವರ ಸಂಗ್ರಹಿಸಿ, ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪ್ರಮಾಣ ಆರೋಗ್ಯ ಕಾರ್ಯಕರ್ತರಲ್ಲಿ ಶೇ. 74 ಮತ್ತು ಫ್ರಂಟ್ ಲೈನ್ ವರ್ಕರ್ ಗಳಲ್ಲಿ ಶೇ. 73 ಸಾಧನೆ ಆಗಿದ್ದು, ಇದು ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಉತ್ತಮವಾಗಿದೆ. ಪ್ರಸ್ತುತ 3ನೇ ಹಂತದ ಲಸಿಕೆ ನೀಡಿಕೆ ಕಾರ್ಯಕ್ರಮ ಆರಂಭಗೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಹೇಳಿದರು.

ಆರೋಗ್ಯ ಇಲಾಖೆಯಿಂದ ಪ್ರಸ್ತುತ ನಡೆಸುತ್ತಿರುವ ಪರೀಕ್ಷೆ ಸಂಖ್ಯೆ ಹೆಚ್ಚಿಸಿ, ಪ್ರಾಥಮಿಕ ಸಂಪರ್ಕಿತರ ಕುರಿತು ಹೆಚ್ಚು ನಿಗಾ ವಹಿಸಿ ಎಂದು ಸಿಇಓ ಡಾ. ನವೀನ್ ಭಟ್ ಹೇಳಿದರು.

ಸಭೆಯಲ್ಲಿ ಡಿ.ಎಚ್.ಓ ಡಾ. ಸುಧೀರಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಕೋವಿಡ್ ವಿಶೇಷಾಧಿಕಾರಿ ಡಾ. ಪ್ರೇಮಾನಂದ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾ ಪರಿಣಿತ ಸಲಹಾ ಸಮಿತಿ ಸದಸ್ಯರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!