Thursday, July 7, 2022
Home ಲೋಕಾಭಿರಾಮ ಆರೋಗ್ಯ ಜಿಲ್ಲೆಯಲ್ಲಿ 73,995 ಮಕ್ಕಳಿಗೆ ಪೋಲಿಯೊ ಲಸಿಕೆ

ಜಿಲ್ಲೆಯಲ್ಲಿ 73,995 ಮಕ್ಕಳಿಗೆ ಪೋಲಿಯೊ ಲಸಿಕೆ

ಸುದ್ದಿಕಿರಣ ವರದಿ
ಮಂಗಳವಾರ, ಫೆಬ್ರವರಿ 22

ಜಿಲ್ಲೆಯಲ್ಲಿ 73,995 ಮಕ್ಕಳಿಗೆ ಪೋಲಿಯೊ ಲಸಿಕೆ
ಉಡುಪಿ: ಈ ತಿಂಗಳ 27ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73,995 ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

662 ಕೇಂದ್ರ
ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಗ್ರಾಮೀಣ ಪ್ರದೇಶದ 61,105 ಮತ್ತು ನಗರ ಪ್ರದೇಶದ 12,890 ಸೇರಿದಂತೆ ಒಟ್ಟು 73,995 ಮಕ್ಕಳಿಗೆ ಫೆ. 27ರಂದು ಪಲ್ಸ್ ಪೋಲಿಯೊ ಲಸಿಕೆ ನೀಡಲು, ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರ ತೆರೆಯಲಾಗುವುದು.

ಅಲ್ಲದೆ 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ ಹಾಗೂ ಎಲ್ಲಾ ಟೋಲ್ ಗೇಟ್ ಗಳಲ್ಲಿಯೂ ಲಸಿಕಾ ಕೇಂದ್ರ ತೆರೆದು ಲಸಿಕೆ ನೀಡಲಾಗುವುದು ಎಂದರು.

ಲಸಿಕಾ ಕಾರ್ಯಕ್ರಮದಲ್ಲಿ 2,794 ಲಸಿಕಾ ಸ್ವಯಂಸೇವಕರು ಮತ್ತು 125 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದು ಆರೋಗ್ಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ ಇಲಾಖೆ ಮತ್ತು ಇತರೆ ಇಲಾಖೆಗಳು, ರೋಟರಿ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆ ಫೆ. 27ರಂದು ಬೆಳಿಗ್ಗೆ 8 ಗಂಟೆಗೆ ನಗರದ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು, ವಲಸೆ ಕಾರ್ಮಿಕರು, ಕೊಳಚೆ ನಿವಾಸಿಗಳು ತಮ್ಮ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೊ ಹನಿ ಹಾಕಿಸಿ, ಮಕ್ಕಳನ್ನು ಪೋಲಿಯೊದಿಂದ ರಕ್ಷಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಎಂ. ಜಿ. ರಾಮ, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!