ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು-ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು-ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು-ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಬಾಗೇಪಲ್ಲಿ: ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯೊಂದಿಗೆ ಮುಖ್ಯಮಂತ್ರಿಗಳ ಮುತುವರ್ಜಿಯಿಂದ ರಾಜ್ಯಾದ್ಯಂತ ಈ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಸೌಲಭ್ಯಗಳನ್ನು ಕಡುಬಡವರು, ಸಮಾಜದ ಪ್ರತಿ ವ್ಯಕ್ತಿಗೆ ದೊರಕಿಸಲು ಹೆಚ್ಚಿನ ಆಸಕ್ತಿಯೊಂದಿಗೆ ಜನತಾ ದರ್ಶನ ಹಮ್ಮಿಕೊಂಡಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಲ್ಲಿಸಿದಾಗ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸಿ ಪರಿಹರಿಸಿದ್ದಲ್ಲಿ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೂ ಒಳ್ಳೆಯ ಹೆಸರು ಬರಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ!ಎಂ.ಸಿ.ಸುಧಾಕರ್ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಬಾಗೇಪಲ್ಲಿ ತಾಲ್ಲೂಕು ಇವರ ಆಶ್ರಯದಲ್ಲಿ  “ತಾಲ್ಲೂಕು ಮಟ್ಟದ ಜನತಾ ದರ್ಶನ ಉದ್ಘಾಟನೆ ಮಾಡಿ ಮಾತನಾಡಿ ಜನರು ತಾಲೂಕು ಕಚೇರಿಗೆ, ಪೊಲೀಸ್ ಠಾಣೆಗೆ, ಗ್ರಾಮ ಪಂಚಾಯಿತಿ ಕಚೇರಿ ಸೇರಿದಂತೆ ಅನೇಕ ಕೆಲಸಗಳಿಗಾಗಿ ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ತಿಂಗಳಪೂರ್ತಿ ಅಲೆಯಬಾರದು. ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಜನರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡುವಲ್ಲಿ ತುರ್ತಾಗಿ ಕ್ರಮವಹಿಸಬೇಕು.

ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಜನರೊಂದಿಗೆ ಸಂವಾದ ಮಾಡದಿದ್ದರೆ, ಅವರ ಕಷ್ಟ, ಕಾರ್ಪಣ್ಯ ಅರಿವಾಗುವುದಿಲ್ಲ. ಕಡ್ಡಾಯವಾಗಿ ತಿಂಗಳಲ್ಲಿ ಎಂಟು ದಿನ ಪ್ರವಾಸ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಸ್ಪಂದಿಸಿದರೆ ನಿಮ್ಮ ಕೆಲಸಕ್ಕೆ ಸಾರ್ಥಕತೆ ದೊರಕುತ್ತದೆ. ಜನರ ಕಷ್ಟಗಳನ್ನು ಸಕಾಲಕ್ಕೆ ಬಗೆಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ‌. ಇದನ್ನು ಗಮನದಲ್ಲಿರಿಸಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಬೇಕು ಎಂದು ಸಚಿವರು ತಾಕೀತು ಮಾಡಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಕ್ಷೇತ್ರದ ಹಲವು ಕಡೆಯಿಂದ ಆಗಮಿಸಿದ ಜನರು ತಮ್ಮ ಸಮಸ್ಯೆಗಳನ್ನ ಸಚಿವರ ಸಮ್ಮುಖದಲ್ಲಿ ಹೇಳಿಕೊಂಡರು. ಸ್ಥಳದಲ್ಲೇ ಉಸ್ತುವಾರಿ ಸಚಿವರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಮಾತನಾಡಿಮುಖ್ಯಮಂತ್ರಿಗಳ ನಿರ್ದೇಶನದಂತೆ, ಆಡಳಿತಾತ್ಮಕ ಚಟುವಟಿಕೆಗಳನ್ನು ಚುರುಕುಗೊಳಿಸಲು ಹಾಗೂ ಸಾರ್ವಜನಿಕರ  ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕಾಗಿ ತಾಲ್ಲೂಕು ಮಟ್ಟದಲ್ಲಿಯೂ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು
ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಿ ಎಂದರು.

ಈ ವೇಳೆ ಸಾರ್ವಜನಿಕರ ಕೆಲವು ಅರ್ಜಿಗಳ ಬಗ್ಗೆ ಜಿಲ್ಲಾಧಿಕಾರಿ  ಪಿ.ಎನ್.ರವೀಂದ್ರ ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಬಾಕಿ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ವರ್ಗಾಯಿಸಲು ಸೂಚನೆ ನೀಡಿದರು. ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸಲು ಆಯಾ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಗಡುವು ನೀಡಿದರು.

ವಸ್ತು ಪ್ರದರ್ಶನ ಮತ್ತು ಆರೋಗ್ಯ ಮೇಳ; ಜನತಾ ದರ್ಶನದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಘೋಷಣ್ ಅಭಿಯಾನ, ಎನ್.ಆರ್.ಎಲ್.ಎಂ. ಸ್ವಸಹಾಯ ಗುಂಪುಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ, ಆರೋಗ್ಯ ಇಲಾಖೆಯಿಂದ ಆರೋಗ್ಯ ಶಿಬಿರ, ತೋಟಗಾರಿಕೆ, ಕೃಷಿ, ಬೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. 

ಕಾರ್ಯಕ್ರಮದಲ್ಲಿ  ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲು ಒಟ್ಟು 6 ಕೌಂಟರ್ ಹಾಕಲಾಗಿತ್ತು. 
ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ, ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಅಗ್ನಿ ಶಾಮಕ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು.

ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ತಿಪ್ಪೆಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಾಕಾಶ್ ನಿಟ್ಟಾಲಿ, ಜಿಲ್ಲಾ ಉಪ ವಿಭಾಗಧಿಕಾರಿ ಅಶ್ವಿನ್,ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರಾಜ್ ಇಮಾಮ್ ಖಾಸಿಂ, ತಹಸೀಲ್ದಾರ್ ಪ್ರಶಾಂತ್ ಕೆ. ಪಾಟೀಲ್, ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಆರ್. ವರ್ಣಿ,ಸರ್ಕಲ್ ಇನ್ಸ್ಪೆಕ್ಟರ್ ಜನಾರ್ದನ್,ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ಕುಮಾರ್,ಪುರಸಭೆ ಮುಖ್ಯಧಿಕಾರಿ ರುದ್ರಮ್ಮ ಶರಣಯ್ಯ, ಸಮಾಜ ಕಲ್ಯಾಣ ಇಲಾಖೆ ಶೇಷಾದ್ರಿ,ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.