ಕೆಜಿಎಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸಂಸತ್ತಿನ ಪೂರ್ವಭಾವಿ ಸಭೆ ಆಯೋಜನೆ

ಕೆಜಿಎಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸಂಸತ್ತಿನ ಪೂರ್ವಭಾವಿ ಸಭೆ ಆಯೋಜನೆ

      ಕೆಜಿಎಫ್: ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಸಂಸತ್ತಿನ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕೆಜಿಎಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸಂಸತ್ತಿನ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. 

ಈ ವೇಳೆ ಕಾಲೇಜಿನ ಪ್ರಾಂಶುಪಾಲ ಡಾ ಕೆ ನಾರಾಯಣ್ ಮಾತನಾಡಿ, ಯುವ ಸಂಸತ್ತು ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ದೇಶದ ಸಂಸತ್ತಿನ ಕಾರ್ಯಚಟುವಟಿಕೆಗಳು, ಪ್ರಜಾಪ್ರಭುತ್ವದ ವ್ಯವಸ್ಥೆ, ಆಡಳಿತದ ವಿಧಾನ ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಗಳ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಮಹತ್ವದ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ದೇಶದ ಆಡಳಿತ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದರು.

ಯುವ ಸಂಸತ್ತಿನ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಉದ್ದೇಶ ಅದರ ಮಹತ್ವ ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಯಿತು. ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಚಿಂತಿಸುವ ಮನೋಭಾವ ಮೂಡಿಸುವುದು ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಗಾಯತ್ರಿ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಯುವರಾಜ್, ಇಒ ವೆಂಕಟೇಶಪ್ಪ, ಬಿಇಒ ನಾರಾಯಣಸ್ವಾಮಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ ನಾರಾಯಣ್ ಮತ್ತು ಕೆಜಿಎಫ್ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಕ್ಷರುಗಳು ಭಾಗವಹಿಸಿದ್ದರು.