ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ-ಹಿರಿಯ ಶ್ರೇಣಿ ನ್ಯಾಯಾಧೀಶೆ ಎಂ. ಭಾರತಿ
ಭಾಗ್ಯನಗರ: ಮಕ್ಕಳ, ಗರ್ಭಿಣಿಯರ ಹಾಗೂ ಬಾಣಂತಿಯರ ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರ ಸೇವನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಪೌಷ್ಟಿಕತೆಯನ್ನು ತಡೆಗಟ್ಟಲು ಪ್ರತಿಯೊಬ್ಬರೂ ಆರೋಗ್ಯ ಮತ್ತು ಪೌಷ್ಟಿಕತೆಯ ಬಗ್ಗೆ ಜಾಗೃತರಾಗಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶೆ ಎಂ. ಭಾರತಿ ತಿಳಿಸಿದರು.
ಪಟ್ಟಣದ ದೇವರಾಜ ಅರಸು ಭವನದಲ್ಲಿ ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಂತ ಅಗತ್ಯವಾಗಿದೆ.
ಗರ್ಭಿಣಿಯರು ಮತ್ತು ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಕ್ಕಳಿಗೆ ಸಮತೋಲಿತ ಆಹಾರ ನೀಡುವ ಮೂಲಕ ಅವರ ಆರೋಗ್ಯಕರ ಬೆಳವಣಿಗೆಗೆ ಪೋಷಕರು ಸಹಕರಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರದಿಂದ ಮಹಿಳೆಯರು ಮತ್ತು ಮಕ್ಕಳಿಗಾಗಿ ವಿವಿಧ ಆರೋಗ್ಯ ಹಾಗೂ ಪೌಷ್ಟಿಕ ಸೇವೆಗಳನ್ನು ಒದಗಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.
ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಆರೋಗ್ಯ ಇಲಾಖೆಯ ಮೂಲಕ ಪೌಷ್ಟಿಕ ಆಹಾರದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ನಿರಂತರವಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಆರೋಗ್ಯವಂತ ತಾಯಿ ಮತ್ತು ಆರೋಗ್ಯವಂತ ಮಗು ಉತ್ತಮ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗಿದ್ದಾರೆ. ಆದ್ದರಿಂದ ಕುಟುಂಬದ ಪ್ರತಿಯೊಬ್ಬರೂ ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು.
ಈ ಸಂಧರ್ಭದಲ್ಲಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಧೀಶೆ ಎಸ್. ರಂಜಿತ,ವಕೀಲರ ಸಂಘದ ಅಧ್ಯಕ್ಷ ಜೆ. ಎನ್. ಮಂಜುನಾಥ್, ಉಪಾಧ್ಯಕ್ಷ ರವಿ,ಕಾರ್ಯದರ್ಶಿ ಜಯಪ್ಪ,ತಾಲೂಕು ಅರೋಗ್ಯ ಆಡಳಿತಾಧಿಕಾರಿ ಸತ್ಯನಾರಾಯಣರೆಡ್ಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎ.ಜಿ.ಸುಧಾಕರ್, ಹಿರಿಯ ವಕೀಲ ನರಸಿಂಹರೆಡ್ಡಿ,ಎ.ನಂಜುಂಡಪ್ಪ,ಪ್ಯಾನಲ್ ವಕೀಲರಾದ ಬಾಬು, ಬಾಲೇ ನಾಯ್ಕ್, ಮಲ್ಲಿಕಾರ್ಜುನ, ವೆಂಕಟರವಣಪ್ಪ, ಲಕ್ಷ್ಮಿಪತಿ, ಬಿ.ಎನ್.ಸುಧಾಕರ,ವಕೀಲರಾದ ನಾಗಭೂಷಣ ಸೇರಿದಂತೆ ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು....