ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಸಂಸದ ಎಂ.ಮಲ್ಲೇಶ್ ಬಾಬು
ವರದಿ: ಮಂಜುನಾಥ್.ವಿ ಕೆಜಿಎಫ್
ಕೆಜಿಎಫ್: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಬೇಕು. ಕ್ರೀಡೆಯ ಮೂಲಕ ತಾಲೂಕು, ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಹ ಸಾಧನೆ ಮಾಡಬೇಕು ಎಂದು ಸಂಸದ ಎಂ.ಮಲ್ಲೇಶ್ ಬಾಬು ಕರೆ ನೀಡಿದರು.
ಕೆಜಿಎಫ್ ನಗರಸಭೆ ಆವರಣದಲ್ಲಿ ಆಯೋಜಿಸಿದ್ದ ಕೆಜಿಎಫ್ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ 2026–27ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲೇ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಉನ್ನತ ಮಟ್ಟದ ಕ್ರೀಡಾಪಟುಗಳಾಗಿ ಹೊರಹೊಮ್ಮುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಮನಸ್ಸಿನಲ್ಲಿ ಏಕಾಗ್ರತೆ ಹೆಚ್ಚುವುದರ ಜೊತೆಗೆ ಮೊಬೈಲ್ ಬಳಕೆಯ ಮೇಲಿನ ಅವಲಂಬನೆಯಿಂದ ದೂರ ಉಳಿಯಲು ಕ್ರೀಡೆ ಸಹಕಾರಿಯಾಗುತ್ತದೆ. ಓದಿನ ಕಡೆ ಗಮನ ಕೇಂದ್ರೀಕರಿಸಲು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತ ವ್ಯಾಯಾಮ ಮತ್ತು ಕ್ರೀಡೆಗಳು ಅತ್ಯಂತ ಅಗತ್ಯ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾತನಾಡಿ, ಕ್ರೀಡೆ ಕೇವಲ ಮನರಂಜನೆಯಲ್ಲ; ಅದು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ಕ್ರೀಡೆಯ ಮೂಲಕ ಯುವಜನರು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು. ಯುವಕರು ಮೊಬೈಲ್ ವ್ಯಸನ ಹಾಗೂ ಮಾದಕ ವಸ್ತುಗಳಿಂದ ದೂರವಿರಲು ಕ್ರೀಡೆ ಪ್ರಮುಖ ಮಾರ್ಗವಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಎಲ್ಲರೂ ಕೈಜೋಡಿಸಿದಾಗ ಉತ್ತಮ ಹಾಗೂ ಸುರಕ್ಷಿತ ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತದೆ ಎಂದರು.
ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡುವಂತೆ ಹಾಗೂ ತಮ್ಮ ಸುತ್ತಮುತ್ತ ಗಾಂಜಾ ಅಥವಾ ಇತರೆ ಮಾದಕ ವಸ್ತುಗಳ ಮಾರಾಟ, ರೌಡಿಗಳ ಬೆದರಿಕೆ, ಗಲಾಟೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಶ್ರೀಧರ್, ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ), ಬಿ.ಜಿ.ನಾರಾಯಣಸ್ವಾಮಿ ಸರ್ಕಾರಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಎಲ್.ಎನ್.ನರಸಿಂಹಮೂರ್ತಿ, ಜೈನ್ ಕಾಲೇಜಿನ ಪ್ರಾಂಶುಪಾಲರು. ರೇಖಾ ಸೇಥಿ ಸೇರಿದಂತೆ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಕ್ರೀಡಾಪಟುಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.