ಮನೆಗಳಿಗೆ ನುಗ್ಗುತ್ತಿರುವ ಚರಂಡಿ ಕೊಳಚೆ ನೀರು: ಗಮನ ಹರಿಸದ ಗ್ರಾಪಂ ಅಧಿಕಾರಿಗಳು
ಬೇತಮಂಗಲ: ಪಟ್ಟಣದ ಟಿಪ್ಪು ನಗರದ 3ನೇ ಬ್ಲಾಕ್‌ನಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿವಾಸಿಗಳು, ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಕೊಳಚೆ ನೀರು ರಸ್ತೆಯಲ್ಲಿ ಹಾಗೂ ಮನೆಗಳೊಳಗೆ ಹರಿಯುತ್ತಿದೆ. ಇದರಿಂದ ದುರ್ವಾಸನೆ ವ್ಯಾಪಿಸಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ಇದಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಗ್ರಾಮ ಪಂಚಾಯಿತಿಯಿಂದ ನಿಯಮಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿಲ್ಲ ಎಂದು ದೂರಿದರು. ಈ ಸಮಸ್ಯೆಯ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೆ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಮಳೆ ಬಂದಾಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟು ಕೊಳಚೆ ನೀರು ಮನೆಗಳಿಗೆ ನುಗ್ಗುವುದರಿಂದ ನಿವಾಸಿಗಳು ಆತಂಕದಲ್ಲಿ ದಿನ ಕಳೆಯುವಂತಾಗಿದೆ ಎಂದು ದೂರಿದರು.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.