ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಎಸ್‌ಐಆರ್‌ ಪ್ರಕ್ರಿಯೆ ರದ್ದುಪಡಿಸುವಂತೆ ಒತ್ತಾಯ

ಬೇತಮಂಗಲ: ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬೆತ್ಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

 ಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಅನುಮಾನಗಳಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ ನಾಗರಾಜ್ ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದರೆ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಫೆಬ್ರವರಿ 25ರಂದು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದರೂ, ಚುನಾವಣಾ ಆಯೋಗವು ಅದಕ್ಕೆ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ನಾಗರಾಜ್ ಆರೋಪಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆ ಅತ್ಯಂತ ಮುಖ್ಯವಾಗಿದ್ದು, ಯಾವುದೇ ರಾಜಕೀಯ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಪ್ರಕ್ರಿಯೆ ನಡೆಯಬಾರದು ಎಂದು ಅವರು ಹೇಳಿದರು.
ಎಸ್‌ಐಆರ್‌ ಪ್ರಕ್ರಿಯೆ ರದ್ದುಪಡಿಸಲು ಆಗ್ರಹ
ಎಸ್‌ಐಆರ್‌ (Special Intensive Revision) ಪ್ರಕ್ರಿಯೆಯನ್ನು ಬಿಜೆಪಿ ಪರವಾಗಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ ಎಂದು ನಾಗರಾಜ್ ಆರೋಪಿಸಿದರು.

 ರಾಜ್ಯದಲ್ಲಿಯೂ ಎಸ್‌ಐಆರ್‌ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿವೆ ಎಂದು ಅವರು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಕೈತಪ್ಪದಂತೆ ಎಚ್ಚರಿಕೆ ವಹಿಸಬೇಕು. ಅದೇ ರೀತಿ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆಯಲ್ಲಿಯೂ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಒತ್ತಾಯಿಸಿದರು.
ಎಸ್‌ಐಆರ್‌ ಪ್ರಕ್ರಿಯೆಯ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಹಾಗೂ ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ನಾಗರಾಜ್ ಆಗ್ರಹಿಸಿದರು.